ಬೆಂಗಳೂರು: ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ದೋಸ್ತಿ ಪಕ್ಷಗಳ ನಾಯಕರು ಸಮಾಲೋಚನೆ ನಡೆಸುತ್ತಿದ್ದಾರೆ.
ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ದೋಸ್ತಿಗಳ ಸಭೆ ಮೈತ್ರಿ ಸರ್ಕಾರ ಸುಭದ್ರಗೊಳಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಜಿ. ಪರಮೇಶ್ವರ್, ಸಚಿವರಾದ ಎಂ.ಬಿ.ಪಾಟೀಲ್ ಸೇರಿದಂತೆ ಉಭಯ ಪಕ್ಷಗಳ ಮಂತ್ರಿಗಳು, ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದು, ಕಾರ್ಯತಂತ್ರ ರೂಪಿಸುತ್ತಿದ್ದಾರೆ.
ಅತೃಪ್ತ ಶಾಸಕರ ಮನವೊಲಿಸಲು ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು. ಬಿಜೆಪಿಯ ಯಾವ ತಂತ್ರಕ್ಕೆ ಯಾವ ರೀತಿ ಪ್ರತಿತಂತ್ರ ರೂಪಿಸಬೇಕು ಎಂಬುದರ ಬಗ್ಗೆ ಗಹನವಾದ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಜೊತೆಗೆ ಉಭಯ ಪಕ್ಷಗಳ ಹಿರಿಯ ಸಚಿವರು ರಾಜೀನಾಮೆ ನೀಡಿ ಅತೃಪ್ತ ಶಾಸಕರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಗಂಭೀರ ಚರ್ಚೆ ನಡೆಸುತ್ತಿದ್ದಾರೆ. ಇದರೊಂದಿಗೆ ಪರ್ಯಾಯ ನಾಯಕತ್ವದ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ತಿಳಿದು ಬಂದಿದೆ.
ಇದೇ ವೇಳೆ ಸಿಎಂ ಮತ್ತು ದೇವೇಗೌಡರು ಕಾಂಗ್ರೆಸ್ ಅತೃಪ್ತರ ನಡೆ ಬಗ್ಗೆ ಅಸಮಾಧಾನ ವ್ಯಕ್ತಪಡಿದ್ದಾರೆ ಎನ್ನಲಾಗಿದೆ.