ಬೆಂಗಳೂರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅನಷ್ಠಾನಕ್ಕೆ ತಂದಿರುವ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿನ ಅರಿವು ಕೇಂದ್ರ, ಗ್ರಾಮೀಣ ಶೌಚಾಲಯ ನಿರ್ಮಾಣ, ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಆರಂಭಿಸಲಾಗಿರುವ ಕೂಸಿನ ಮನೆ ಮುಂತಾದ ಸಾಮಾಜಿಕ ಬದ್ಧತೆಯ ಕಾರ್ಯಕ್ರಮಗಳಿಗೆ ಬ್ಯಾಂಕುಗಳು ತಮ್ಮ ಸಾಮಾಜಿಕ ಜವಾಬ್ದಾರಿಯಡಿ ಪ್ರಾಯೋಜನೆ ಮಾಡಲು ಮುಂದೆ ಬರಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಶುಕ್ರವಾರ ಸಂಜೆ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, ಗ್ರಾಮೀಣಾಭಿವೃದ್ಧಿ ಇಲಾಖೆಯ ಹಣಕಾಸು ವ್ಯವಹಾರ ಬ್ಯಾಂಕುಗಳ ಮೂಲಕ ನಡೆಯುತ್ತಿದ್ದು, ಗ್ರಾಮೀಣ ಜನರ ಅಭಿವೃದ್ಧಿಯಲ್ಲಿ ಬ್ಯಾಂಕುಗಳು ತಮ್ಮ ಬದ್ಧತೆಯನ್ನು ತೋರಬೇಕೆಂದು ಹೇಳಿದರು.
ವಿವಿಧ ಬ್ಯಾಂಕ್ ಅಧಿಕಾರಿಗಳ ಜೊತೆ ಪ್ರಿಯಾಂಕ್ ಖರ್ಗೆ ಸಭೆ ಡಾ. ಬಿ. ಆರ್. ಅಂಬೇಡ್ಕರ್ ಅವರ ಆಶಯದಂತೆ ಸಮಾಜದ ಎಲ್ಲ ಸ್ತರದ ಜನರಿಗೆ ಶಿಕ್ಷಣ ದೊರಕಿಸಬೇಕಿರುವುದು ಸರ್ಕಾರದ ಕರ್ತವ್ಯವಾಗಿದ್ದು, ಅದರಂತೆ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ವಿದ್ಯಾರ್ಥಿಗಳಿಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಉಪಯುಕ್ತ ಪುಸ್ತಕಗಳನ್ನು ಈ ಗ್ರಂಥಾಲಯಗಳಲ್ಲಿ ಸೇರಿಸಲಾಗುತ್ತಿದೆ.
ಹಲವಾರು ಮಾಹಿತಿ ತಂತ್ರಜ್ಞಾನ ಕಂಪನಿಗಳು ಇಂತಹ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ಕೊಡುಗೆ ನೀಡಲು ಮುಂದೆ ಬಂದಿವೆ ಎಂದರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಯೂನಿಯನ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಮುಂತಾದ ಬ್ಯಾಂಕ್‌ಗಳ ಅಧಿಕಾರಿಗಳು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಆಯುಕ್ತರಾದ ಅಂಜುಂ ಪರವೇಜ್, ಶ್ರೀಮತಿ ಪ್ರಿಯಾಂಕಾ ಫ್ರಾನ್ಸಿಸ್ ಸಭೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ:ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ :"ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ"- ಸಚಿವ ಈಶ್ವರ್ ಖಂಡ್ರೆ