ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವವರು ಮತ್ತು ಕಮೆಂಟ್ ಮಾಡುವವರ ಮೇಲೆ ಹದ್ದಿನ ಕಣ್ಣಿಡಲು ಪೊಲೀಸ್ ಇಲಾಖೆ ತೀರ್ಮಾನಿಸಿದೆ. ಈ ಸಂಬಂಧ ಸಾಮಾಜಿಕ ಜಾಲತಾಣಗಳ ಕಂಪನಿಗಳ ಜೊತೆ ಸಭೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಪೋಸ್ಟ್ ಗಳ ನಿಯಂತ್ರಣಕ್ಕೆ ಸಭೆ: ಬಸವರಾಜ ಬೊಮ್ಮಾಯಿ - ಬೆಂಗಳೂರು ಗಲಭೆ
ಸಾಮಾಜಿಕ ಜಾಲತಾಣಗಳ ಜೊತೆ ಸಭೆ ನಡೆಸಿ ಯಾವ ರೀತಿಯಾಗಿ ಪ್ರಚೋದನಾತ್ಮಕ ಪೋಸ್ಟ್ಗಳನ್ನು ನಿಯಂತ್ರಣ ಮಾಡಬೇಕೆನ್ನುವ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರ್.ಟಿ. ನಗರದ ನಿವಾಸದಲ್ಲಿ ಮಾತನಾಡಿದ ಅವರು, ಡಿ ಜೆ ಹಳ್ಳಿ, ಕೆ ಜಿ ಹಳ್ಳಿ ವ್ಯಾಪ್ತಿಯಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಗಲಭೆ ಪ್ರಕರಣದ ತನಿಖೆ ನಡೆಯುತ್ತಿದೆ. ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಸಂದೇಶಗಳು ಪೋಸ್ಟ್ ಆಗುತ್ತಿವೆ. ಘಟನೆ ಆದ ನಂತರ ಕ್ರಮ ಕೈಗೊಳ್ಳುವುದು ಒಂದು ಭಾಗವಾದರೆ ಘಟನೆ ಸಂಭವಿಸುವ ಮುನ್ನವೇ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎನ್ನುವ ಕುರಿತು ಚರ್ಚೆ ನಡೆಸಲಾಗುತ್ತಿದೆ.
ಮುಂದಿನ ವಾರದಲ್ಲಿ ಸೈಬರ್ ಕ್ರೈಂ ಪೊಲೀಸರ ಹಾಗೂ ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಗಲಭೆ ನಂತರ ತಮಗೆ ಭದ್ರತೆ ಇಲ್ಲವೆಂದು ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ. ಅವರಿಗೆ ಮತ್ತು ಅವರ ಮನೆ ವ್ಯಾಪ್ತಿಯ ಪ್ರದೇಶದಲ್ಲಿಯೂ ಎಲ್ಲ ರೀತಿಯ ಭದ್ರತೆ ನೀಡುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.