ಕರ್ನಾಟಕ

karnataka

ETV Bharat / state

ಮೇಕೆದಾಟು ಯೋಜನೆಯೊಂದೇ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ: ಡಿಸಿಎಂ ಡಿ.ಕೆ.ಶಿವಕುಮಾರ್ - ಕಾವೇರಿ ನೀರು ಹಂಚಿಕೆ ಸುಪ್ರೀಂ ತೀರ್ಪು

ಕಾವೇರಿ ನೀರು ಹಂಚಿಕೆ ವಿಚಾರವಾಗಿ ಉಂಟಾಗಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೇ ಪರಿಹಾರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್
ಡಿಸಿಎಂ ಡಿ.ಕೆ. ಶಿವಕುಮಾರ್

By ETV Bharat Karnataka Team

Published : Aug 25, 2023, 3:34 PM IST

ಬೆಂಗಳೂರು: ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಎದ್ದಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಬಗ್ಗೆ ನಾವು ಸುಪ್ರೀಂ ಕೋರ್ಟ್​ಗೆ ಮಾಹಿತಿ ನೀಡಿದ್ದೇವೆ ಎಂದು ನೀರಾವರಿ ಸಚಿವ, ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯ ಕಾವೇರಿ ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿದ್ದು, ಇದು ತಾಂತ್ರಿಕ ಸಮಿತಿಯಾಗಿದೆ. ಸದ್ಯ ಅವರು ತಾಂತ್ರಿಕ ಅಂಶಗಳ ಬಗ್ಗೆ ಗಮನಹರಿಸಬೇಕು. ಈ ಪರಿಸ್ಥಿತಿಯಲ್ಲಿ ಪ್ರಮುಖ ಪರಿಹಾರವೆಂದರೆ ಮೇಕೆದಾಟು ಯೋಜನೆ ಮಾತ್ರ. ಮೇಕೆದಾಟು ಅಣೆಕಟ್ಟು ನಿರ್ಮಾಣವಾಗಿದ್ದರೆ ಇಂದು ಈ ಸಮಸ್ಯೆ ಹಾಗೂ ಪರಿಸ್ಥಿತಿಯೇ ಉದ್ಭವಿಸುತ್ತಿರಲಿಲ್ಲ. ಕಳೆದ ವರ್ಷ 400ಕ್ಕೂ ಹೆಚ್ಚು ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರದ ಪಾಲಾಗಿದೆ. ಅದರಲ್ಲಿ ಸ್ವಲ್ಪ ಪ್ರಮಾಣದ ನೀರನ್ನು ಮೇಕೆದಾಟು ಅಣೆಕಟ್ಟು ಮೂಲಕ ಹಿಡಿದಿಟ್ಟಿದ್ದರೆ ಸಮಸ್ಯೆಯೇ ಎದುರಾಗುತ್ತಿರಲಿಲ್ಲ ಎಂದರು.

ಮೇಕೆದಾಟು ಅಣೆಕಟ್ಟು ನೀರನ್ನು ನಾವು ನೀರಾವರಿಗೆ ಬಳಸಲು ಸಾಧ್ಯವಿಲ್ಲ. ಕೇವಲ ಕುಡಿಯುವ ನೀರಿಗೆ ಬಳಸಬಹುದು. ಮೇಕೆದಾಟು ಇಂತಹ ಸಂಕಷ್ಟದ ಸಮಯದಲ್ಲಿ ಹೆಚ್ಚು ಸಹಾಯಕ್ಕೆ ಬರುತ್ತದೆ. ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ಗಮನಹರಿಸಬೇಕು. ನಾವು ನಮ್ಮ ಅರ್ಜಿಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದೇವೆ. ಸುಪ್ರೀಂ ಕೋರ್ಟ್ ಗಮನಕ್ಕೂ ತರುತ್ತೇವೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಕೆಲವು ವಿರೋಧವಿದ್ದರೂ ನಾವು ನ್ಯಾಯಾಲಯದ ಆದೇಶ ಗೌರವಿಸುತ್ತೇವೆ. ನಮ್ಮ ಸರ್ಕಾರ ನ್ಯಾಯಾಲಯಕ್ಕೆ ಎಲ್ಲಾ ಮಾಹಿತಿ ನೀಡಿದ್ದು, ನಮ್ಮ ರಾಜ್ಯದ ರೈತರ ಹಿತ ಕಾಯಲು ಬದ್ಧವಿದ್ದೇವೆ. ತಮಿಳುನಾಡು ತನ್ನ ಪಾಲಿನ ನೀರನ್ನು ಯಾವ ಉದ್ದೇಶಕ್ಕಾಗಿ ಬೇಕಾದರೂ ಬಳಸಬಹುದು. ಅದನ್ನು ನಾವು ಪ್ರಶ್ನಿಸಲು ಸಾಧ್ಯವಿಲ್ಲ. ಆದರೆ ತಮಿಳುನಾಡು ಸಂಕಷ್ಟದ ಸಮಯದಲ್ಲಿ ಈ ನೀರನ್ನು ಎಚ್ಚರಿಕೆಯಿಂದ ಬಳಸಬಹುದಾಗಿತ್ತು. ನಾವು ನಮ್ಮ ರೈತರಿಗೆ ಬಿತ್ತನೆ ಮಾಡದಂತೆ ಸಲಹೆ ನೀಡಿರುವಂತೆ ಅವರು ಅವರ ರೈತರಿಗೆ ಸಲಹೆ ನೀಡಬಹುದಾಗಿತ್ತು ಎಂದರು.

ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ರಾಜಕೀಯ ಉದ್ದೇಶದ ವಿರೋಧದ ಹೊರತಾಗಿ ರಾಜ್ಯದ ಯಾವುದೇ ರೈತರು ವಿರೋಧ ವ್ಯಕ್ತಪಡಿಸಿಲ್ಲ. ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಹೇಳಲಾಗುತ್ತಿದೆಯೇ ಹೊರತು, ನಮಗೆ ನಷ್ಟವಾಗಿದೆ ಎಂದು ಯಾರೂ ಹೇಳುತ್ತಿಲ್ಲ. ಕಾರಣ ನಾವು ನಮ್ಮ ರೈತರಿಗೆ ಅಗತ್ಯ ಸಮಯದಲ್ಲಿ ನೀರು ಹರಿಸಿ, ಅವರ ನೆರವಿಗೆ ಧಾವಿಸಿದ್ದೇವೆ. ನಮ್ಮ ಜಿಲ್ಲಾ ಸಚಿವರು ರೈತರ ಜೊತೆ ಸಭೆ ಮಾಡಿ ಈ ಸಮಯದಲ್ಲಿ ಬಿತ್ತನೆ ಮಾಡಬೇಡಿ ಎಂದು ಮನವಿ ಮಾಡಿ, ಅರಿವು ಮೂಡಿಸಿದ್ದಾರೆ. ಇಂದು ಸುಪ್ರೀಂ ಕೋರ್ಟ್ ನೀರು ಬಿಡುಗಡೆ ವಿಚಾರದಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಸಮಸ್ಯೆಗೆ ಪರಿಹಾರ ಬೇಕಾದರೆ ಅದಕ್ಕೆ ಮೇಕೆದಾಟು ಯೋಜನೆಯೊಂದೇ ಪರಿಹಾರ ಎಂದು ಸುಪ್ರೀಂ ಕೋರ್ಟ್ ಹಾಗೂ ತಮಿಳುನಾಡಿಗೆ ಹೇಳಬಯಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ:ಕಾವೇರಿ ನೀರಿನ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸಿ: ಸಿಎಂಗೆ ಶೋಭಾ ಕರಂದ್ಲಾಜೆ ಆಗ್ರಹ

ABOUT THE AUTHOR

...view details