ಬೆಂಗಳೂರು: ರಾಜ್ಯದ ಲಂಬಾಣಿ ತಾಂಡ, ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಲಾಗಿದ್ದು, ಇದುವರೆಗೂ 1034 ತಾಂಡಾ ಮತ್ತು ಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸುವ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಲಂಬಾಣಿ ತಾಂಡ ಹಾಗೂ ಹಟ್ಟಿಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಬೇಕು ಎಂಬ ಬೇಡಿಕೆ ಇತ್ತು. ಯಾವುದೇ ಸರ್ಕಾರ ಇದನ್ನು ಈಡೇರಿಸಲು ಇದೇ ಮೊದಲ ಬಾರಿಗೆ 1034 ತಾಂಡಾ ಮತ್ತು ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸುವ ಅಧಿಸೂಚನೆ ಹೊರಡಿಸಿದೆ ಎಂದು ಹೇಳಿದರು.
ಇಂದು ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಲಂಬಾಣಿ ತಾಂಡಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಸಂಬಂಧ ಲಂಬಾಣಿ ಅಭಿವದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ರಾಜೀವ್ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದರು.