ಬೆಂಗಳೂರು:ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಇದೇ 12ರಿಂದ 16ರವರೆಗೆ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಪರೀಕ್ಷಾ ಕೇಂದ್ರಗಳಿರುವ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತಿತರ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಈ ಸಭೆಯಲ್ಲಿ ಮಾತನಾಡಿದ ಸಚಿವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಕಲು ಮಾಡುವುದು ಸೇರಿದಂತೆ ಯಾವುದೇ ಅಕ್ರಮಕ್ಕೆ ಕಿಂಚಿತ್ತೂ ಅವಕಾಶ ಮಾಡಿಕೊಡಬಾರದು. ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆಸಬೇಕು. ಯಾರಿಗೂ ಪರೀಕ್ಷಾ ವ್ಯವಸ್ಥೆ ಹಾಳುಗೆಡುವಲು ಅಥವಾ ಈ ನೇಮಕಾತಿ ಪ್ರಕ್ರಿಯೆಗೆ ಕಳಂಕ ತರಲು ಆಸ್ಪದ ಕೊಡಬಾರದು. ಹಾಗೇನಾದರೂ ಆದರೆ, ಪರೀಕ್ಷಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠರನ್ನೇ ಹೊಣೆಗಾರರಾಗಿ ಮಾಡಲಾಗುವುದು ಎಂದು ಹೇಳಿದರು.
33 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಪರೀಕ್ಷೆ:33 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷೆಗಳು ಬೆಂಗಳೂರು ನಗರ, ಮೈಸೂರು, ಮಂಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಮತ್ತು ಕಲಬುರಗಿಯಲ್ಲಿ ನಡೆಯಲಿವೆ. ಇದಕ್ಕಾಗಿ 1,409 ಕೊಠಡಿ ಮೇಲ್ವಿಚಾರಕರು, 82 ವೀಕ್ಷಕರು, 82 ಕಸ್ಟೋಡಿಯನ್ಸ್ ಮತ್ತು 164 ಮಂದಿಯ ವಿಶೇಷ ಜಾಗೃತ ದಳವನ್ನು ರಚಿಸಲಾಗಿದೆ ಎಂದು ತಿಳಿಸಿದರು.