ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಹೇಳಿದರು.
ಖನಿಜ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರು ಈ ಭರವಸೆ ನೀಡಿದ್ದಾರೆ. ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಬಹಳಷ್ಟು ಒಳ್ಳೆಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹಲವಾರು ಬಾರಿ ಪ್ರತಿಭಟನೆ ಹಾಗೂ ಹೋರಾಟ ನಡೆಸಿದ್ದಾರೆ. ಕೆಲವೊಂದು ತಾಂತ್ರಿಕ ಹಾಗೂ ಆಡಳಿತಾತ್ಮಕ ವಿಷಯಗಳಿಂದಾಗಿ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಈ ಎಲ್ಲಾ ಬೇಡಿಕೆಗಳ ಬಗ್ಗೆ ಅಧಿಕಾರಿಗಳ ಸಮ್ಮುಖದಲ್ಲಿ ವಿಸ್ತೃತ ಚರ್ಚೆ ನಡೆಸಲಾಗಿದೆ. ಬೇಡಿಕೆ ಈಡೇರಿಕೆ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.