ಬೆಂಗಳೂರು:ಕಾವೇರಿ ನದಿ ಪಾತ್ರ ಹಾಗೂ ಇತರ ಹಳ್ಳಗಳಲ್ಲಿ ಮರಳು ಗಣಿಗಾರಿಕೆಯನ್ನು ನಿಷೇಧಿಸಲಾಗಿದೆ. ಯಾರಾದರೂ ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಇಲಾಖೆ ಸಚಿವ ಹಾಲಪ್ಪ ಆಚಾರ್ ಅವರು ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ಪ್ರಶ್ನೋತ್ತರ ವೇಳೆ ಜೆಡಿಎಸ್ ಸದಸ್ಯ ಡಾ. ಅನ್ನದಾನಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನದಿ ನೀರಿನಲ್ಲಿ ಮರಳು ಗಣಿಗಾರಿಕೆಯಿಂದ ನದಿ ಪಾತ್ರಕ್ಕೆ ಆಗಬಹುದಾದ ಹಾನಿ ಕುರಿತ ಪ್ರಕರಣದ ಸುಪ್ರೀಂಕೋರ್ಟ್ನ ತೀರ್ಪಿನಂತೆ ಕೇಂದ್ರದ ಪರಿಸರ ಇಲಾಖೆ ಸುಸ್ಥಿರ ಮರಳು ಗಣಿಗಾರಿಕೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದರಂತೆ ನದಿ ನೀರಿನ ಪಾತ್ರದಲ್ಲಿ ಮರಳು ಗಣಿಗಾರಿಕೆ ನಿಷೇಧಿಸಿರುತ್ತದೆ. ಹಾಗಾಗಿ ರಾಜ್ಯ ಸರ್ಕಾರವೂ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳಿಗೆ ತಿದ್ದುಪಡಿ ತಂದು ಮರಳು ಗಣಿಗಾರಿಕೆ ನಡೆಸುವುದನ್ನು ನಿಷೇಧಿಸಿ ನಿಯಮ ರೂಪಿಸಿರುತ್ತದೆ ಎಂದು ಹೇಳಿದರು.