ಬೆಂಗಳೂರು:ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಎರಡನೇ ಅಲೆಯ ನಿಯಂತ್ರಣಕ್ಕೆ ಸರ್ಕಾರ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದಕ್ಕೆ ಸಿನಿಮಾ ಸೇರಿದಂತೆ ಇತರೆ ಕ್ಷೇತ್ರಗಳಿಂದ ವಿರೋಧ ವ್ಯಕ್ತವಾಗುತ್ತಿದೆ.
ವಿರೋಧಗಳಿಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೆಲ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ. ಮುಖ್ಯಮಂತ್ರಿಗಳು, ಸಚಿವ ಸಂಪುಟದ ಸದಸ್ಯರು, ತಾಂತ್ರಿಕ ಸಲಹಾ ಸಮಿತಿಯ ತಜ್ಞರು, ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಎಲ್ಲಾ ಆಯಾಮಗಳನ್ನು ಪರಿಗಣಿಸಿ ರಾಜ್ಯದ ಜನರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ ಎಂದರು.
ಕಳೆದ ವರ್ಷದ ಲಾಕ್ ಡೌನ್ ಮತ್ತು ನಂತರದ ನಿರ್ಬಂಧಗಳಿಂದ ಚಿತ್ರರಂಗ ಸೇರಿದಂತೆ ಅನೇಕ ಉದ್ದಿಮೆ, ವ್ಯಾಪಾರ, ವಹಿವಾಟುಗಳಿಗೆ ತೊಂದರೆ ಆಗಿರುವುದರ ಬಗ್ಗೆ ಸರ್ಕಾರಕ್ಕೆ ಅರಿವಿದೆ, ಕಳಕಳಿಯೂ ಇದೆ. ಆದರೆ, ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಈ ಕಠಿಣ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಮತ್ತೆ ಎದುರಾಗಿದೆ ಎಂದು ಟೀಟ್ವ್ ಮಾಡಿದ್ದಾರೆ.