ಬೆಂಗಳೂರು :ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿತಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ತಿಳಿಸಿದರು.
ಇಲಾಖೆಯ ಉಪ ನಿದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇ-ಗವರ್ನೆನ್ಸ್ ಇಲಾಖೆಯ ಸಹಕಾರದೊಂದಿಗೆ ಆಗಿರುವ ಕೆಲವೊಂದು ತಾಂತ್ರಿಕ ನೂನ್ಯತೆಗಳನ್ನು ಸರಿಪಡಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದರು.
ಆಗಸ್ಟ್ ತಿಂಗಳಿನಲ್ಲಿ ಶೇಕಡ 88 ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್ ತಿಂಗಳ ಹಣ ಶೇಕಡಾ 100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಮಾಡಬೇಕು ಎಂದು ಸಚಿವರು ಹೇಳಿದರು. ಗೃಹಲಕ್ಷ್ಮಿ ಯೋಜನೆಯಡಿ ಹಲವು ಫಲಾನುಭವಿಗಳಿಗೆ 2,000 ರೂ. ಪಾವತಿಯಾಗುತ್ತಿಲ್ಲ. ಎರಡನೇ ತಿಂಗಳಲ್ಲಿ ಹಲವರಿಗೆ ಪಾವತಿಯಲ್ಲಿ ವ್ಯತ್ಯಯವಾಗಿದೆ. ಈ ಸಂಬಂಧ ಬಿಜೆಪಿ ಈಗಾಗಾಲೇ ಗೃಹಲಕ್ಷ್ಮಿ ಹಣ ಪಾವತಿಯಾಗದಿರುವ ಬಗ್ಗೆ ಸರ್ಕಾರವನ್ನು ಟೀಕಿಸುತ್ತಿದೆ.