ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ: ಸಚಿವ ಮಹದೇವಪ್ಪ ಮೈಸೂರು: ಸಮಾಜಕ್ಕೆ ಮಾರ್ಗದರ್ಶನ ಮಾಡುವವರೇ ಈ ರೀತಿ ಮಾತನಾಡುವುದು ಎಷ್ಟು ಸರಿ. ಶತಮಾನಗಳಿಂದ ಶೋಷಿತವಾಗಿರುವ ಸಮುದಾಯವನ್ನು ಮತ್ತೆ ಯಾಕೆ ನೋಯಿಸುತ್ತೀರಿ. ಉಪೇಂದ್ರ ಅವರ ಹೇಳಿಕೆಯಿಂದ ಇಡೀ ಸಮಾಜಕ್ಕೆ ನೋವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಇಂದು ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಟ ಉಪೇಂದ್ರ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ. ಅವರಾಡಿದ ಮಾತಿನಿಂದ ಇಡೀ ಸಮಾಜಕ್ಕೆ ನೋವಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಉಪೇಂದ್ರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಮುಂದಿನ ಪ್ರಕ್ರಿಯೆಯನ್ನು ಕಾನೂನು ಮಾಡುತ್ತದೆ ಎಂದರು.
ಸಚಿವರಿಂದ ಸರಣಿ ಟ್ವೀಟ್: ಅದಕ್ಕೂ ಮೊದಲು ಸೋಷಿಯಲ್ ಮೀಡಿಯಾದಲ್ಲಿ ಸರಣಿ ಟ್ವೀಟ್ಗಳನ್ನು ಮಾಡಿದ್ದ ಸಚಿವರು, ಉಪೇಂದ್ರ ಅವರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಆದರೆ, ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯಕ್ಕೆ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ ಎಂದು ಟೀಕಿಸಿದ್ದಾರೆ.
ಇನ್ನು ಸೂಕ್ಷ್ಮವಾಗಿ ಗಮನಿಸುವಾಗ ಉಪೇಂದ್ರ ಅವರು ತಮ್ಮ ಮಾತುಗಳಿಗೆ ಪೂರಕವಾಗಿ ಹೊಲಗೇರಿ ಎಂಬ ಪದವನ್ನು ಬಳಸಿರುವುದೇ ಅಪ್ರಸ್ತುತ. ಜೊತೆಗೆ ಅವರು ಕ್ಷಮೆ ಯಾಚನೆಯಲ್ಲೂ ಸಹ ನಾನೂ ಕೂಡಾ ಬಡತನದಿಂದ ಬಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ, ಬಡತನವೇ ಬೇರೆ. ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ ಎಂಬ ಸಂಗತಿಯನ್ನು ಅವರು ಅರಿಯಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿಲ್ಲ ಎಂದು ಸಹಜವಾಗಿ ಅನಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ. ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಈ ಉಪೇಂದ್ರ ಅವರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಲೈವ್ ಕಾರ್ಯಕ್ರಮದಲ್ಲಿ ಸಮುದಾಯವೊಂದರ ಕುರಿತು ನಟ ಉಪೇಂದ್ರ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿತ್ತು. ಆರೋಪಗಳು ಬಂದ ಬೆನ್ನಲ್ಲೇ ನಟ ಉಪೇಂದ್ರ ಅವರು ಆ ವಿಡಿಯೋ ಡಿಲಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಎಲ್ಲ ಕ್ಷಮೆಯಾಚಿಸಿ ಪೋಸ್ಟ್ ಒಂದನ್ನೂ ಹಂಚಿಕೊಂಡಿದ್ದರು. ಆದರೆ, ನಂತರವೂ ಅವರ ಮೇಲೆ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿವೆ. ಕ್ಷಮೆಯಾಚಿಸಿದ ನಂತರವೂ ಎಫ್ಐಆರ್ ದಾಖಲಾದ ಬೆನ್ನಲ್ಲೆ ಟ್ವೀಟ್ ಮಾಡಿದ್ದ ಉಪೇಂದ್ರ ಅವರು, ತಾವು ಕೇಳಿದ ಕ್ಷಮೆಯನ್ನು ಸ್ವೀಕರಿಸುವ ದೊಡ್ಡ ಮನಸೂ ಇಲ್ಲವೇ ಎಂದು ಕೇಳಿದ್ದರು.
ಇದನ್ನೂ ಓದಿ:Upendra: 'ನನ್ನ ಕ್ಷಮೆ ಸ್ವೀಕರಿಸುವ ದೊಡ್ಡತನವೂ ಇಲ್ಲವಾಯಿತೇ? ಯಾಕೆ ಇಷ್ಟೊಂದು ದ್ವೇಷ?': ಉಪೇಂದ್ರ