ಬೆಂಗಳೂರು:ರಾಜ್ಯದಲ್ಲಿ 47 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅದರಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಯಲ್ಲಿ ತಿಳಿಸಿದರು.
ಇಂದು ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಬಿ.ಶಿವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 27 ಸಾವಿರ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. 1:2 ಅಭ್ಯರ್ಥಿಗಳ ಪರಿಶೀಲನೆ 15 ದಿನಗಳಲ್ಲಿ ನಡೆಯಲಿದೆ. ಆನಂತರ ಪ್ರಾಥಮಿಕ ಶಾಲೆಗಳ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರನ್ನು ಖಾಲಿ ಇರುವ ಶಾಲೆಗಳಿಗೆ ನಿಯೋಜಸಲಾಗುವುದು ಎಂದು ಹೇಳಿದರು.
ಸರ್ಕಾರಿ ಪ್ರೌಢಶಾಲೆಗಳ ವಿವಿಧ ವೃಂದಗಳ 2,500 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯದ ಆರ್ಥಿಕ ಸಂಪನ್ಮೂಲಗಳನ್ನು ಆಧರಿಸಿ ಖಾಲಿ ಇರುವ ಮತ್ತು ಖಾಲಿಯಾಗುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಪ್ರಸಕ್ತ ಸಾಲಿನಲ್ಲಿ ವಿವೇಕ ಯೋಜನೆಯಡಿ 990 ಕೋಟಿ ರೂ. ವೆಚ್ಚದಲ್ಲಿ 6,601 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಐಹೊಳೆ ಡಿ.ಮಹಾಲಿಂಗಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಳಗಾವಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಿಗೆ 533 ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ ಎಂದು ಹೇಳಿದರು.