ಬೆಂಗಳೂರು:ಸತತ ಮಳೆಯಿಂದ ನಲುಗಿರುವ ರಾಮನಗರ ಜಿಲ್ಲೆಯ ಮಳೆಹಾನಿ ಹಾಗು ಅನಾಹುತದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಶ್ವತ್ಥನಾರಾಯಣ ಚರ್ಚೆ ನಡೆಸಿದ್ದು, ತ್ವರಿತ ಪರಿಹಾರ ಕಾರ್ಯಾಚರಣೆ ಕುರಿತು ಮಾತುಕತೆ ನಡೆಸಿದ್ದಾರೆ. ಆರ್.ಟಿ ನಗರದಲ್ಲಿರುವ ಸಿಎಂ ಖಾಸಗಿ ನಿವಾಸಕ್ಕೆ ಭೇಟಿದ ಸಚಿವ ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಿದರು.
ರಾಮನಗರ ಜಿಲ್ಲೆಯ ಸ್ಥಿತಿಗತಿ ಕುರಿತು ವಿವರ ನೀಡಿದ ಸಚಿವರು, ಮಳೆಹಾನಿ ಪರಿಹಾರ ಕಾರ್ಯಾಚರಣೆ ಕುರಿತು ಚರ್ಚಿಸಿದರು. ನಂತರ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಮನವಿ ಮಾಡಿದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ಸಿಎಂ ಮಧ್ಯಾಹ್ನ ರಾಮನಗರಕ್ಕೆ ಭೇಟಿ ನೀಡಿ ಮಳೆಹಾನಿ ವೀಕ್ಷಣೆ ಮಾಡಿ ಪರಿಹಾರ ಕಾರ್ಯಾಚರಣೆ ಕುರಿತು ಅಧಿಕಾರಿಗಳಿಗೆ ಮತ್ತಷ್ಟು ಸಲಹೆ ಸೂಚನೆ ನೀಡುವ ಭರವಸೆ ನೀಡಿದರು.
ಸಿಎಂ ಭೇಟಿ ಬಳಿಕ ಮಾತನಾಡಿದ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ, ಜಿಲ್ಲೆಯಲ್ಲಿ ಸೃಷ್ಟಿಯಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬೊಮ್ಮಾಯಿಯವರ ಜತೆ ಬೆಳಗ್ಗೆ ಚರ್ಚಿಸಿದೆ. ಜತೆಗೆ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿ ಇದ್ದು ತತ್‍ಕ್ಷಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕ್ಷಿಪ್ರವಾಗಿ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದಿದ್ದಾರೆ.