ಬೆಂಗಳೂರು: 'ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಳ್ಳುವ ಅವಕಾಶ ನನಗೆ ಸಿಕ್ಕಿದ್ದಕ್ಕೆ ಖುಷಿಯಾಗುತ್ತಿದೆ. ಸಿಎಂ ಯಡಿಯೂರಪ್ಪ, ಸಂಪುಟ ಸಹೋದ್ಯೋಗಿಗಳು ಮತ್ತು ಪಕ್ಷದ ಶಾಸಕರ ಸಹಕಾರದಿಂದ ಇದು ಸಾಧ್ಯವಾಯಿತು' ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ಅಂಗೀಕಾರ ದೊರೆತ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, '2010ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಲ್ ಮಂಡಿಸಿದ್ದರು. ಆದರೆ ನಂತರ ಬಂದ ಸರ್ಕಾರ ಅದನ್ನು ಹಾಗೆಯೇ ಉಳಿಸಿತ್ತು. ಈಗ ಗೋವುಗಳ ಸಂರಕ್ಷಣೆ ಆಗಬೇಕು ಎಂದು ಉತ್ತರಪ್ರದೇಶ ಮತ್ತು ಗುಜರಾತ್ಗೆ ಹೋಗಿ ಅಧ್ಯಯನ ಮಾಡಿ ಕಾಯ್ದೆ ರಚಿಸಿದ್ದೇವೆ' ಎಂದರು.