ಬೆಂಗಳೂರು:ಶಹಪುರ ತಾಲೂಕಿನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮೃತಪಟ್ಟವರ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ವಿಧಾನಸಭೆಯಲ್ಲಿ ಇಂದು ತಿಳಿಸಿದರು.
ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಮಾತನಾಡಿದರು ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿಗಳ ಜೊತೆ ಹೋಗಿ ಪರಿಹಾರದ ಚೆಕ್‌ಗಳನ್ನು ಮೃತರ ಕುಟುಂಬದವರಿಗೆ ವಿತರಿಸುವುದಾಗಿ ತಿಳಿಸಿದರು.
ಸಿಲಿಂಡರ್ ಸ್ಫೋಟದ ನಂತರ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾಗಿ ಅವರು ಹೇಳಿದರು. ಈ ವೇಳೆ ಕಾನೂನು ಸಚಿವ ಜೆ. ಸಿ ಮಾಧುಸ್ವಾಮಿ ಮಾತನಾಡಿ, ಸಿಲಿಂಡರ್ ಸ್ಫೋಟದ ಬಗ್ಗೆ ಯಾದಗಿರಿ ಜಿಲ್ಲಾಧಿಕಾರಿಯಿಂದ ವರದಿ ಪಡೆಯಲಾಗುತ್ತಿದೆ. ಅನಿಲ ಸಿಲಿಂಡರ್ ಸರಬರಾಜು ಕಂಪೆನಿ 2 ಲಕ್ಷ ರೂ. ಪರಿಹಾರ ನೀಡುತ್ತಿದೆ. ವಿಮಾ ಹಣ ಬರದಿದ್ದರೆ ಪರಿಶೀಲಿಸಿ ಸರ್ಕಾರದಿಂದ ಪರಿಹಾರ ನೀಡುವುದಾಗಿ ಹೇಳಿದರು.
ಇದಕ್ಕೂ ಮುನ್ನ ಕಾಂಗ್ರೆಸ್ ಶಾಸಕ ಈಶ್ವರ ಖಂಡ್ರೆ ವಿಷಯ ಪ್ರಸ್ತಾಪಿಸಿ, ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಈಗಾಗಲೇ 15 ಮಂದಿ ಮೃತಪಟ್ಟಿದ್ದಾರೆ. ಇದುವರೆಗೂ ಮೃತರ ಕುಟುಂಬಕ್ಕೆ ಪರಿಹಾರ ನೀಡಿಲ್ಲ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಓದಿ:ಕೈಗಾರಿಕಾ ಭದ್ರತಾ ಪಡೆ ನಿಯೋಜನೆ ಮೂಲಕ ಕಾನೂನು ಬಾಹಿರ ಕೃತ್ಯಗಳಿಗೆ ಬ್ರೇಕ್: ಗೃಹ ಸಚಿವ ಆರಗ ಜ್ಞಾನೇಂದ್ರ