ಬೆಂಗಳೂರು:ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿಯನ್ನು, ಕಾನೂನು ಚೌಕಟ್ಟು ಮೀರದಂತೆ ವೈಜ್ಞಾನಿಕ ರೀತಿಯಲ್ಲಿ ಪರಿಶೀಲಿಸಿ ಶೀಘ್ರವಾಗಿ ಅಂತಿಮ ಪಟ್ಟಿಯನ್ನು ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ತಿಂಗಳ 14ರಿಂದ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಸಚಿವರು ಮಂಗಳವಾರ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೇಷ್ಠತಾ ಪಟ್ಟಿ ಗೋಜಲಾಗಿದ್ದು, ಹಲವಾರು ಜಿಲ್ಲೆಗಳ ಅಧಿಕಾರಿಗಳು ನ್ಯಾಯಾಲಯಗಳ ಮೊರೆ ಹೋಗಿರುವುದರಿಂದ ಕಗ್ಗಂಟಾಗಿರುವ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮುಂದಿನ ಸಾಮಾನ್ಯ ವರ್ಗಾವಣೆ ಸಮಯಕ್ಕೆ ಕೌನ್ಸೆಲಿಂಗ್ ನೀತಿಯನ್ನು ಜಾರಿಗೆ ತಂದು ವರ್ಗಾವಣೆ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಹೇಳಿದರು. ಅಲ್ಲದೇ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಪರಿಶೀಲನೆ ನಡೆಸಿ ಎಲ್ಲ ಅಧಿಕಾರಿಗಳಿಗೂ ಈ ಸೌಲಭ್ಯ ವಿಸ್ತರಿಸುವುದಾಗಿ ಸಚಿವರು ಇದೇ ವೇಳೆ ತಿಳಿಸಿದರು.