ಬೆಂಗಳೂರು : ರಾಜ್ಯದ ಗ್ರಾಮೀಣ ಭಾಗಗಳ ಕೆಲವು ಸ್ಥಳಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು, ಪರಿಹಾರ ಕಂಡುಕೊಳ್ಳುವ ಸಲುವಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಕ್ಷಣವೇ ತಾಲ್ಲೂಕು ಪ್ರವಾಸ ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ಹಾಗೂ ತಂತ್ರಜ್ಞಾನ ಇಲಾಖೆಗಳ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದರು. ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.
ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ನೀರಿನ ಸಮಸ್ಯೆ ಸಂಬಂಧ ಸಚಿವರು ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಭೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. 16 ಜಿಲ್ಲೆಗಳಲ್ಲಿ ನೀರಿನ ಕೊರತೆಯುಂಟಾಗಿದ್ದು, ಇವುಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ನೀರಿನ ತೀವ್ರ ಕೊರತೆ ಎದುರಾಗಿದೆ ಎಂಬ ವಿಷಯವನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸಚಿವರ ಗಮನಕ್ಕೆ ತಂದರು. ರಾಜ್ಯದ 4 ಜಿಲ್ಲೆಗಳಲ್ಲಿ ಪರಿಸ್ಥಿತಿ ಸುಧಾರಣೆ ಹಂತದಲ್ಲಿದೆ ಎಂದರು. ಅಂತರ್ಜಲ ಕುಸಿತದಿಂದ ಬಳಲುತ್ತಿರುವ ಜಿಲ್ಲೆಗಳನ್ನು ಆದ್ಯತೆಯಾಗಿ ಪರಿಗಣಿಸಿ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಲು ಸಚಿವರು ಇದೇ ವೇಳೆ ನಿರ್ದೇಶಿಸಿದರು.
ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಸಾರ್ವಜನಿಕರು ನೀಡುವ ದೂರುಗಳ ಪರಿಹಾರಕ್ಕೆ ಆದ್ಯತೆ ನೀಡಬೇಕೆಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ ಅವರು, ತಾಲ್ಲೂಕು ಅಧಿಕಾರಿಗಳನ್ನು ದೂರು ನಿರ್ವಹಣೆ ಕಾರ್ಯಕ್ಕೆ ಸಜ್ಜುಗೊಳಿಸಲು ಹೇಳಿದರು. ನೀರಿನ ಅಭಾವ, ಕಲುಷಿತ ನೀರು ಸರಬರಾಜು ಕುರಿತಂತೆ ಬರುವ ದೂರುಗಳಿಗೆ ಅಧಿಕಾರಿಗಳು ಪ್ರಥಮ ಆದ್ಯತೆ ನೀಡಿ ತಕ್ಷಣದ ಕ್ರಮ ಕೈಗೊಳ್ಳಲು ಸಲಹೆ ಕೊಟ್ಟರು.