ಬೆಂಗಳೂರು: "ಗಡಿನಾಡು ಕಾಸರಗೋಡು ಜಿಲ್ಲೆಯ ಅಡೂರು ಕನ್ನಡ ಶಾಲೆಗೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನು ನೇಮಿಸುವಂತೆ ಕೇರಳ ಸರ್ಕಾರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿರುವುದು ಅತ್ಯಂತ ಸಂತೋಷ ತಂದಿದೆ" ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಇದರ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನಸಾಮಾನ್ಯರ ನಂಬಿಕೆ ಮತ್ತಷ್ಟು ಬಲಗೊಂಡಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಅಡೂರು ಶಾಲೆಗೆ ಮಲಯಾಳ ಶಿಕ್ಷಕಿ ನೇಮಕದಿಂದಾಗಿ ಕಳೆದ ವರ್ಷ ಉದುಮ ಮತ್ತು ಹೊಸಕೋಟೆ ಸರ್ಕಾರಿ ಪ್ರೌಢಶಾಲೆಗಳ ಕನ್ನಡ ವಿಭಾಗಗಳಿಗೆ ಮಲಯಾಳ ಭಾಷೆ ಮಾತ್ರ ತಿಳಿದಿರುವ ಸಮಾಜ ವಿಜ್ಞಾನ ಶಿಕ್ಷಕರನ್ನು ನೇಮಿಸಲಾಗಿತ್ತು. ಉದುಮ ಪ್ರೌಢಶಾಲೆಗೆ ಕೂಡ ಇದೇ ರೀತಿ ಶಿಕ್ಷಕಿ ನೇಮಕಗೊಂಡಿದ್ದರು. ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಸೇರಿದಂತೆ ಗಡಿನಾಡಿನ ಕನ್ನಡ ಹೋರಾಟಗಾರರು ಸೇರಿ ಪ್ರತಿಭಟನೆ ನಡೆಸಿದ್ದರು. ಈ ಕುರಿತು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅಡೂರು ಶಾಲೆಯಲ್ಲಿ ಕನ್ನಡ ಮಾಧ್ಯಮಕ್ಕೆ ಮಲಯಾಳ ಶಿಕ್ಷಕಿ ಪಾಠ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿರುವುದರಿಂದ ಗಡಿನಾಡ ಕನ್ನಡಿಗರ ಹೋರಾಟಕ್ಕೆ ಜಯ ಸಿಕ್ಕಿದೆ.