ಬೆಂಗಳೂರು:ಟ್ವೀಟ್ ಮೂಲಕ ದೊಡ್ಡ ಸುದ್ದಿಯಾಗಿ, ಬ್ರಾಹ್ಮಣ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿರುವ ನಟ ಚೇತನ್ ವಿರುದ್ಧ ಇದೀಗ ಸಚಿವ ಶಿವರಾಮ್ ಹೆಬ್ಬಾರ್ ಸಹ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೇತನ್ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಬ್ರಾಹ್ಮಣ ಸಮುದಾಯದ ಅವಹೇಳನ ಮಾಡಿ ಪೋಸ್ಟ್ ಮಾಡಿದ್ದರು. ಇದನ್ನು ಬ್ರಾಹ್ಮಣ ಸಮುದಾಯದ ಮುಖಂಡರು, ಸಂಘ ಸಂಸ್ಥೆಗಳು ತೀವ್ರವಾಗಿ ಖಂಡಿಸಿದ್ದವು. ಚೇತನ್ ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ಗೆ ದೂರು ಸಲ್ಲಿಸಿದ್ದರು.
ನಟ ಚೇತನ್ ಬಂಧಿಸುವಂತೆ ಸಿಎಂಗೆ ಒತ್ತಾಯಿಸಿದ ಸಚಿವ ಶಿವರಾಮ್ ಹೆಬ್ಬಾರ್ - ನಟ ಚೇತನ್ ವಿವಾದಾತ್ಮಕ ಹೇಳಿಕೆ
ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ ಬ್ರಾಹ್ಮಣ ಸಮುದಾಯ ತಿರುಗಿ ಬಿದ್ದಿದ್ದು, ನಿರಂತರವಾಗಿ ಸಮುದಾಯದ ಪ್ರಮುಖರು ಚೇತನ್ ನಡೆಯನ್ನು ಖಂಡಿಸುತ್ತಿದ್ದಾರೆ. ಇದೀಗ ಸಚಿವ ಶಿವರಾಮ್ ಹೆಬ್ಬಾರ್ ಸಹ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, ಚೇತನ್ ರನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಒತ್ತಾಯಿಸಿದ್ದಾರೆ.
ಇದೀಗ ಚೇತನ್ ವಿರುದ್ಧ ಆಕ್ರೋಶ ಹೊರಹಾಕಿರುವ ಸಚಿವ ಶಿವರಾಮ್ ಹೆಬ್ಬಾರ್, ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿದೆ. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವಂತಹದು. ಸಮಾಜದಲ್ಲಿ ತಾನು ಗುರುತಿಸಿಕೊಳ್ಳಬೇಕು ಅಂತಲೋ, ಗಂಜಿ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.