ಬೆಂಗಳೂರು: ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರು ಇಂದು ನಿಧನರಾಗಿದ್ದಾರೆ. ಅವರ ಸಾವಿಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸಂಸದ ಸುರೇಶ್ ಅಂಗಡಿ ಅವರ ಸಾವಿಗೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಶ್ರೀ ಸುರೇಶ್ ಅಂಗಡಿಯವರ ಹಠಾತ್ ಅಗಲಿಕೆಗೆ ಅತೀವ ಸಂತಾಪವನ್ನು ವ್ಯಕ್ತಪಡಿಸುತ್ತ, ಭಗವಂತ ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ, ಅವರ ಕುಟುಂಬದವರಿಗೆ, ಬಂಧು ವರ್ಗದವರಿಗೆ, ಅಪಾರ ಅಭಿಮಾನಿಗಳಿಗೆ ಮತ್ತು ಕಾರ್ಯಕರ್ತರಿಗೆ ನೋವು ಭರಿಸುವ ಶಕ್ತಿ ನೀಡಲಿಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.
ಸುರೇಶ್ ಅಂಗಡಿ ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕೂಡ ಅಂಗಡಿಯವರ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ.
ಸಚಿವ ಪಿಯೂಷ್ ಗೋಯಲ್ ಹಾಗೂ ರಾಜ್ಯಸಭೆ ಸದಸ್ಯ ಡಾ. ಸೈಯದ್ ನಸೀರ್ ಹುಸೇನ್ ಕೂಡ ಸುರೇಶ್ ಅಂಗಡಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಆತ್ಮೀಯ ಸ್ನೇಹಿತರು, ಸಹೋದರ ಸಮಾನರಾದ ಸುರೇಶ್ ಅಂಗಡಿ ಅವರು ಕೋವಿಡ್ ಸೋಂಕಿನಿಂದ ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಜನಸೇವೆಯನ್ನೇ ಮೂಲ ಮಂತ್ರವನ್ನಾಗಿಸಿಕೊಂಡು ನಾಡಿನ ಅಭಿವೃದ್ಧಿಯ ಕುರಿತು ಹಲವಾರು ಕನಸುಗಳನ್ನು ಹೊತ್ತಿದ್ದ ಸರಳ ವ್ಯಕ್ತಿತ್ವದ ಅಂಗಡಿ ಅವರ ಅಗಲಿಕೆ ನಾಡಿಗೆ, ರಾಷ್ಟ್ರಕ್ಕೆ ಮತ್ತು ಭಾರತೀಯ ಜನತಾ ಪಾರ್ಟಿಗೆ ತುಂಬಲಾರದ ನಷ್ಟ ಎಂದು ಸಂಸದ ಜಿ. ಎಂ. ಸಿದ್ದೇಶ್ವರ್ ಅವರು ಸಂತಾಪ ಸೂಚಕ ಸಂದೇಶದಲ್ಲಿ ಹೇಳಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.