ಬೆಂಗಳೂರು:ಶಾಸಕ ಸ್ಥಾನದಿಂದ ಅನರ್ಹಗೊಂಡು ಪರಿಷತ್ತಿಗೆ ನೇಮಕಗೊಂಡಿರುವ ಎಂಟಿಬಿ ನಾಗರಾಜ್, ಹೆಚ್.ವಿಶ್ವನಾಥ್ ಹಾಗೂ ಆರ್.ಶಂಕರ್ ಅವರಿಗೆ ಸಚಿವ ಸ್ಥಾನ ನೀಡದಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ಆದೇಶವನ್ನು ಸೋಮವಾರಕ್ಕೆ ಕಾಯ್ದಿರಿಸಿದೆ.
ಈ ಮೂವರಿಗೂ ಸಚಿವ ಸ್ಥಾನ ನೀಡಬಾರದು ಎಂದು ಕೋರಿ ವಕೀಲ ಎ.ಎಸ್.ಹರೀಶ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಹಾಗೂ ಎಂಎಲ್ಸಿಗಳ ಪರ ವಾದಿಸಿದ ಹಿರಿಯ ವಕೀಲರಾದ ಉದಯ್ ಹೊಳ್ಳ ಮತ್ತು ಅಶೋಕ್ ಹಾರನಹಳ್ಳಿ, ಪ್ರತಿವಾದಿಗಳಾದ ಎಂಟಿಬಿ ನಾಗರಾಜ್, ಆರ್.ಶಂಕರ್ ಹಾಗೂ ಹೆಚ್.ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡಿದರೆ ಯಾವುದೇ ನಿಯಮಗಳು ಉಲ್ಲಂಘನೆಯಾಗುವುದಿಲ್ಲ. ಶಾಸಕರನ್ನು ಅನರ್ಹ ಮಾಡಿದ್ದ ಸ್ಪೀಕರ್ ಆದೇಶವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಅಲ್ಲದೆ ತೀರ್ಪಿನಲ್ಲಿ ಎಲ್ಲಿಯೂ ಅವರಿಗೆ ಸಚಿವ ಸ್ಥಾನ ನೀಡದಂತೆ ತಿಳಿಸಿಲ್ಲ ಎಂದು ವಿವರಿಸಿದರು.