ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಹಾಗೂ ಕುರುಬ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ಆಡಳಿತ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಇತರರು ವಿಧಾನಸಭೆಯಲ್ಲಿ ಪಕ್ಷಬೇಧ ಮರೆತು ಧರಣಿ ನಡೆಸಿದರು.
ಶೂನ್ಯ ವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ವಿಷಯ ಪ್ರಸ್ತಾಪಿಸಿ, ಪಂಚಮಸಾಲಿ, ಕುರುಬ, ಗಂಗಾಮತಸ್ಥ ಸಮುದಾಯಗಳಿಗೆ ಮೀಸಲಾತಿಯನ್ನು ಸರ್ಕಾರ ಯಾವಾಗ ಕೊಡಲಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಆಗ ಸಚಿವರಿಂದ ಸರಿಯಾದ ಉತ್ತರ ಬಾರದಿದ್ದಾಗ, ಮೊದಲು ಯತ್ನಾಳ್ ಸದನದ ಬಾವಿಗೆ ಇಳಿದು ಧರಣಿ ಆರಂಭಿಸಿದರು. ಪಕ್ಷಬೇಧ ಮರೆತು ಬಂಡೆಪ್ಪ ಕಾಶಂಪೂರ, ಡಾ. ಯತೀಂದ್ರ ಸಿದ್ದರಾಮಯ್ಯ, ತುಕಾರಾಂ, ಅರವಿಂದ್ ಬೆಲ್ಲದ್ ಸೇರಿ ಆ ಸಮುದಾಯದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಯತ್ನಾಳ್‌ಗೆ ಸಾಥ್ ನೀಡಿದರು.
ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ 80 ಲಕ್ಷದಷ್ಟು ಜನಸಂಖ್ಯೆ ಇರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಕೂಡಲಸಂಗಮದಿಂದ 400 ಕಿ.ಮೀ ಪಾದಯಾತ್ರೆ ನಡೆಸಲಾಗುತ್ತಿದೆ.
ಆರ್ಥಿಕ ಹಾಗೂ ಶೈಕ್ಷಣಿಕ ಮೀಸಲಾತಿಯನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಈಗಾಗಲೇ ಮುಖ್ಯಮಂತ್ರಿಗಳು ಭರವಸೆ ನೀಡಿದ್ದರೂ, ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿಗೆ ಸೇರ್ಪಡೆ ಮಾಡುವ ಕೆಲಸವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅದೇ ರೀತಿ ಕುರುಬ ಸಮುದಾಯದವರು ಎಸ್ಟಿಗೆ ಸೇರಿಸಬೇಕೆಂದು ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ, ಈಶ್ವರಾನಂದ ಪುರಿ ಸ್ವಾಮೀಜಿ ನೇತೃತ್ವದಲ್ಲಿ ಕಾಗಿನೆಲೆಯಿಂದಲೂ ಬೆಂಗಳೂರಿಗೆ ಪಾದಯಾತ್ರೆ ನಡೆಸಲಾಗುತ್ತಿದೆ. ಗಂಗಾಮತಸ್ಥರಿಗೆ ಎಸ್‌ಟಿ ಪ್ರಮಾಣ ಪತ್ರ ಕೊಡುತ್ತಿಲ್ಲ.
ಈ ಸಮುದಾಯಕ್ಕೆ ಯಾವಾಗ ಮೀಸಲಾತಿ ಸೌಲಭ್ಯ ಕಲ್ಪಿಸಲಾಗುತ್ತದೆ ಎಂಬುದನ್ನು ಖಚಿತವಾಗಿ ಹೇಳಬೇಕು, ನಿರ್ಧಿಷ್ಟ ಗಡುವಿನೊಳಗೆ ಮೀಸಲಾತಿ ಸೇರ್ಪಡೆ ಆಗಬೇಕು ಎಂದು ಪಟ್ಟು ಹಿಡಿದರು.