ಬೆಂಗಳೂರು:ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಚುನಾವಣೆಯಲ್ಲಿ ಸ್ಪರ್ಧಿಸಿರುವ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ ನೀಡಬೇಕೆಂದು ಮಾಜಿ ಸಭಾಪತಿ ವಿ ಆರ್ ಸುದರ್ಶನ್ ಹಾಗೂ ಶಾಸಕರು ಮನವಿ ಮಾಡಿದ್ದಾರೆ.
ಅ.17 ರಂದು ಮತದಾನ:ಪ್ರೆಸ್ ಕ್ಲಬ್ ನಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಾಜಿ ಸಭಾಪತಿ, ಹಿರಿಯ ಕಾಂಗ್ರೆಸ್ ಮುಖಂಡ ವಿ ಆರ್ ಸುದರ್ಶನ್ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಅಧ್ಯಕ್ಷರ ಚುನಾವಣೆ ಇದೇ ಅಕ್ಟೋಬರ್ 17 ರಂದು ಸೋಮವಾರ ನಡೆಯಲಿದೆ. ಈ ಚುನಾವಣೆಯಲ್ಲಿ ಕರ್ನಾಟಕದ ಪ್ರತಿನಿಧಿಗಳಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಮತಗಟ್ಟೆಯನ್ನು ಕ್ವೀನ್ಸ್ ರಸ್ತೆಯಲ್ಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ತೆರೆಯಲಾಗುತ್ತಿದೆ. ಅ.17 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಎಂದು ಹೇಳಿದರು.
ಈ ಚುನಾವಣೆಯಲ್ಲಿ ನಮ್ಮ ರಾಜ್ಯದವರೇ ಆದ ಮುತ್ಸದ್ಧಿ ರಾಜಕಾರಣಿ ಎಂ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ನಿಷ್ಠಾವಂತ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಮರ್ಥ ಆಡಳಿತಗಾರರಾಗಿದ್ದು, ತಮಗೆ ವಹಿಸಿದ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅತ್ಯಂತ ಸಮರ್ಥವಾಗಿ ಹಾಗೂ ಪರಿಣಾಮಕಾರಿಯಾಗಿ ನಿಭಾಯಿಸಿದ್ದಾರೆ.
ವಿವಿಧ ಖಾತೆಗಳನ್ನು ನಿಭಾಯಿಸಿರುವ ಖರ್ಗೆ:ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡರಲ್ಲಿಯೂ ಕ್ಯಾಬಿನೆಟ್ ಸಚಿವರಾಗಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ ಅನುಭವಿಗಳಾಗಿದ್ದಾರೆ. ಅಲ್ಲದೆ 9 ಬಾರಿ ಶಾಸಕರಾಗಿ, 2 ಬಾರಿ ಸಂಸದರಾಗಿ ಚುನಾಯಿತರಾಗಿದ್ದಾರೆ. ಅಷ್ಟೇ ಅಲ್ಲದೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಮತ್ತು ಕರ್ನಾಟಕ ವಿಧಾನಸಭೆಯಲ್ಲಿ ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ, ಕರ್ನಾಟಕ ವಿಧಾನ ಪರಿಷತ್ತಿನಲ್ಲಿ ಒಮ್ಮೆ ಸಭಾ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ. ಎಐಸಿಸಿಯ ಪ್ರಧಾನ ಕಾರ್ಯದರ್ಶಿಗಳಾಗಿ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಸಹ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.
ಮತ ನೀಡುವಂತೆ ಮನವಿ: ಖರ್ಗೆ ಅವರು, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿದು ಮಹಾತ್ಮ ಗಾಂಧಿ, ಪಂಡಿತ್ ಜವಹರಲಾಲ್ ನೆಹರು, ಡಾ. ಬಾಬಾ ಸಾಹೆಬ್ ಅಂಬೇಡ್ಕರ್ ಮತ್ತು ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ತತ್ವ ಸಿದ್ಧಾಂತಗಳನ್ನು ಸಾರುತ್ತಿದ್ದಾರೆ. ಈ ಮೂಲಕ ನಮ್ಮ ಮಾಜಿ ಪ್ರಧಾನಮಂತ್ರಿಗಳಾದ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಆಶಯದಂತೆ ಕಾಂಗ್ರೆಸ್ ಸಂಘಟನೆಯನ್ನು, ಸದೃಢಗೊಳಿಸುವ ಉದ್ದೇಶದಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಇಂತಹ ಮುತ್ಸದ್ದಿ ರಾಜಕಾರಣಿ ಮತ್ತು ಅನುಭವಿ ಆಡಳಿತಗಾರರಾದ ನಮ್ಮವರೇ ಅದ ಮಲ್ಲಿಕಾರ್ಜುನ ಖರ್ಗೆಯವರಿಗೆ ತಮ್ಮ ಮತವನ್ನು ಕೊಡಿ ಎಂದು ಮನವಿ ಮಾಡಿದರು.