ಕರ್ನಾಟಕ

karnataka

ETV Bharat / state

ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ಜೊತೆ ಪುಟ್ಟಣ್ಣ! ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆ

ಕಾಂಗ್ರೆಸ್​ ಸೇರಿದ ಎಂಎಲ್​ಸಿ ಪುಟ್ಟಣ್ಣ - ಬಿಜೆಪಿ ಪ್ರಾಥಮಿಕ ಸದಸ್ಯತ್ವ ಮತ್ತು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ

mlc-puttanna-joins-congress
ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ಜೊತೆ ಪುಟ್ಟಣ್ಣ! ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆ

By

Published : Mar 9, 2023, 8:49 PM IST

ಬೆಂಗಳೂರು :ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಪುಟ್ಟಣ್ಣ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಮತ್ತು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ತೊರೆದು ಬಿಜೆಪಿ ಸೇರಿ ರಾಜಕೀಯ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದ ಪುಟ್ಟಣ್ಣ ಬಿಜೆಪಿ ಸರಿಬಾರದ ಕಾರಣ ಬಿಜೆಪಿಗೂ ಗುಡ್ ಬೈ ಹೇಳಿ ಕಾಂಗ್ರೆಸ್ ಕೈ ಹಿಡಿದಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯನಾದ ನಾನು ಭಾರತೀಯ ಜನತಾ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಪಕ್ಷಕ್ಕೆ ನನ್ನ ವೈಯಕ್ತಿಕ ಕಾರಣಗಳಿಂದ ಇಂದಿನಿಂದಲೇ ಜಾರಿಗೆ ಬರುವಂತೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ತಾವು ನನ್ನ ರಾಜೀನಾಮೆ ಪತ್ರವನ್ನು ಸ್ವೀಕರಿಸಬೇಕಾಗಿ ಮನವಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.

ಇದೇ ವೇಳೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯನಾದ ನಾನು ನನ್ನ ವೈಯಕ್ತಿಕ ಕಾರಣಗಳಿಂದ ವಿಧಾನ ಪರಿಷತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ತಾವು ನನ್ನ ರಾಜೀನಾಮೆಯನ್ನು ಅಂಗೀಕರಿಸಲು ಕೋರುತ್ತಿದ್ದೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.

ಇಂದು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಇಂದು ಮಧ್ಯಾಹ್ನ ಪುಟ್ಟಣ್ಣ ಅವರು ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಎರಡು ವರ್ಷದ ಹಿಂದೆ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಗೆದ್ದು ವಿಧಾನಪರಿಷತ್ತಿಗೆ ಬಿಜೆಪಿಯಿಂದ ಪ್ರವೇಶ ಮಾಡಿದ್ದರು.

ಬೆಂಗಳೂರಿನ ರಾಜಾಜಿನಗರ ವಿಧಾನಸಭೆ ಕ್ಷೇತ್ರದಿಂದ ಮುಂದಿನ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಪುಟ್ಟಣ್ಣ, ಕಾಂಗ್ರೆಸ್ ನಾಯಕರ ಜಂಟಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಾಗುವ ಮೂಲಕ ತಮ್ಮ ಸೇರ್ಪಡೆಯ ವಿಚಾರವಾಗಿ ಎದ್ದಿದ್ದ ಎಲ್ಲ ಊಹಾಪೋಗಳಿಗೂ ತೆರೆ ಎಳೆದಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕರೆದಿರುವ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಕೊನೆಗೂ ತಮ್ಮ ಅಧಿಕೃತ ಸಂದೇಶವನ್ನು ತಿಳಿಸಿದ್ದಾರೆ.

ಸೇರ್ಪಡೆಗೆ ವಿರೋಧ: ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಸೇರ್ಪಡೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕೆಪಿಸಿಸಿ ಕಚೇರಿಗೆ ಆಗಮಿಸಿದ ಅವರು ಸುದ್ದಿಗೋಷ್ಠಿಗೆ ಪುಟ್ಟಣ್ಣ ಆಗಮಿಸುವುದನ್ನು ಖಂಡಿಸಿದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧಿಸಿ ಪುಟ್ಟಣ್ಣ ಅವರನ್ನು ಸುದ್ದಿಗೋಷ್ಠಿಗೆ ಕರೆತಂದರು. ಈ ಸಂದರ್ಭದಲ್ಲಿ ಮನೋಹರ ಹಾಗೂ ಅವರ ಬೆಂಬಲಿಗರು ಪುಟ್ಟಣ್ಣ ಸೇರ್ಪಡೆ ವಿರೋಧಿಸಿ ಧಿಕ್ಕಾರ ಕೂಗಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣಧೀರ್ ಸಿಂಗ್ ಸುರ್ಜೇವಾಲಾ ಮಾತನಾಡಿ, ಪುಟ್ಟಣ್ಣ ಅವರು ತಮ್ಮ ಒಂದು ದೃಢ ನಿರ್ಧಾರ ಕೈಗೊಂಡಿದ್ದಕ್ಕೆ ಅಭಿನಂದಿಸುತ್ತೇನೆ. ಫಿಫ್ಟಿ ಪರ್ಸೆಂಟ್ ಸರ್ಕಾರದಲ್ಲಿ ಅವರು ಸ್ವತಂತ್ರವಾಗಿ ಶಿಕ್ಷಣ ಸಂಸ್ಥೆಯ ಏಳಿಗೆಯನ್ನು ಬಯಸಿ, ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬಂದಿದ್ದಾರೆ. ತಮ್ಮ ಸದಸ್ಯತ್ವ ಅವಧಿ ಇನ್ನು ನಾಲ್ಕು ವರ್ಷ ಇರುವಾಗಲೇ ಪಕ್ಷವನ್ನು ತೊರೆಯುವ ಧೈರ್ಯ ತೋರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಂಬಿಕೆಯಿಂದ ಶಿಕ್ಷಕ ಸಮೂಹದ ಸಂರಕ್ಷಣೆಗಾಗಿ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಮಾತನಾಡಿ, ಇಂದು ಸಂಜೆ 4:30ಕ್ಕೆ ತೀರ್ಮಾನ ಕೈಗೊಂಡು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ರಾಜೀನಾಮೆ ಪತ್ರವನ್ನು ಸಭಾಪತಿಗಳ ಅನುಪಸ್ಥಿತಿಯ ಹಿನ್ನೆಲೆ ಅವರ ಕಚೇರಿಗೆ ತಲುಪಿಸಿದ್ದೇನೆ. ಪಕ್ಷದ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರ ಕಚೇರಿಗೆ ತಲುಪಿಸಿದ್ದೇನೆ. ಇಡೀ ರಾಜ್ಯದ ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಪರವಾಗಿ ಹಾಗೂ ಶಿಕ್ಷಣ ಕ್ಷೇತ್ರ ಹಾಗೂ ಸಂಸ್ಥೆಗಳ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ಕೆಲವಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ ಮತ್ತೆ ಕೆಲವನ್ನು ಬಗೆಹರಿಸಲು ಆಗಿಲ್ಲ. ನಾನು ಬಿಜೆಪಿಯಲ್ಲಿ ಸತ್ತಂತೆ ಇರಬೇಕಾದ ಪರಿಸ್ಥಿತಿ ಇತ್ತು. ಯಾಕೆ ಏನು ಎತ್ತ ಎನ್ನುವುದನ್ನು ಆಮೇಲೆ ವಿವರಿಸುತ್ತೇನೆ. ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನಾನು ತಿಳಿಸಿದ್ದೇನೆ ಎಂದರು.

ಇದನ್ನೂ ಓದಿ :ಸಂಸದೆ ಸುಮಲತಾ ಬಿಜೆಪಿ ಸೇರುವ ಮಾತುಕತೆ ನಡೆದಿದೆ: ಸಿಎಂ ಬೊಮ್ಮಾಯಿ

ABOUT THE AUTHOR

...view details