ಬೆಂಗಳೂರು:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ಅನರ್ಹತೆ ವಿಚಾರವಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇಂದು ಕರಾಳ ದಿನ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ. ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್ಡಿಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಕಿಡಿ ಕಾರಿದರು.
ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ. ರಾಹುಲ್ ಗಾಂಧಿಯವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಆಕ್ರೋಶದ ಕೈಗೆ ಬುದ್ಧಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.