ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಕುರಿತು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಯಿತು.
ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿರುವ ಮೋದಿ, ಶಾಸಕರ ಭವನದ ಆವರಣದಲ್ಲಿರುವ ಕನಕದಾಸ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಅಲ್ಲಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಟರ್ಮಿನಲ್-2 ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಿದ್ದು, ಕೊನೆಯದಾಗಿ ವಿಮಾನ ನಿಲ್ದಾಣದ ಹತ್ತಿರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.