ಬೆಂಗಳೂರು :ಮಣಿಪಾಲ್ ಸಮೂಹ ಸಂಸ್ಥೆಯ 75 ಕೋಟಿ ರೂಪಾಯಿ ಹಣವನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಸಂಸ್ಥೆಯ ಉಪ ಪ್ರಧಾನ ವ್ಯವಸ್ಥಾಪಕ ಆಗಿದ್ದ ಆರೋಪಿ ಸಂದೀಪ್ ಗುರುರಾಜ್ಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಸಂಸ್ಥೆಯ ಹಣ ದುರ್ಬಳಕೆ: ಆರೋಪಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ - Money Laundering Case -2020
'ಇದೀಗ ದೋಷಾರೋಪ ಪಟ್ಟಿ ಸಲ್ಲಿಕೆ ವಿಳಂಬವಾಗಿದೆ ಎಂಬ ಆಧಾರದ ಮೇಲೆ ಜಾಮೀನು ನೀಡುವುದು ಸೂಕ್ತವಲ್ಲ. ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಸದ್ಯದಲ್ಲೇ ಅಂತಿಮ ಆರೋಪಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ'.
ಆರೋಪಿ ಸಂದೀಪ್ ಗುರುರಾಜ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿಎಂ ಶೀಲವಂತ ವಾದಿಸಿ, ಅರ್ಜಿದಾರರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಈ ಹಿಂದೆಯೂ ಹೈಕೋರ್ಟ್ ವಜಾಗೊಳಿಸಿದೆ. ಇದೀಗ ದೋಷಾರೋಪ ಪಟ್ಟಿ ಸಲ್ಲಿಕೆ ವಿಳಂಬವಾಗಿದೆ ಎಂಬ ಆಧಾರದ ಮೇಲೆ ಜಾಮೀನು ನೀಡುವುದು ಸೂಕ್ತವಲ್ಲ. ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಸದ್ಯದಲ್ಲೇ ಅಂತಿಮ ಆರೋಪಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ. ಆದ್ದರಿಂದ ಜಾಮೀನು ಮಂಜೂರು ಮಾಡಬಾರದು ಎಂದು ಮನವಿ ಮಾಡಿದ್ದರು. ವಕೀಲರ ವಾದ ಪರಿಗಣಿಸಿರುವ ಪೀಠ ಜಾಮೀನು ನೀಡಲು ನಿರಾಕರಿಸಿ ಅರ್ಜಿ ವಜಾಗೊಳಿಸಿದೆ. ಹಾಗೆಯೇ ಪ್ರಕರಣದ ಸಂಬಂಧ ತನಿಖಾಧಿಕಾರಿಗಳು ಅಂತಿಮ ಆರೋಪಪಟ್ಟಿ ಸಲ್ಲಿಸಿದ ಬಳಿಕ ಜಾಮೀನು ಕೋರಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.
ಪ್ರಕರಣದ ಹಿನ್ನೆಲೆ:ಮಣಿಪಾಲ್ ಸಮೂಹ ಸಂಸ್ಥೆಗಳ ವಿವಿಧ ಬ್ಯಾಂಕ್ ಖಾತೆಗಳಿಂದ 75 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಆರೋಪಿ ಸಂದೀಪ್ ಗುರುರಾಜ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ಸಂದೀಪ್ ಗುರುರಾಜ್ ಮತ್ತಿತರರನ್ನು 2018ರ ಡಿಸೆಂಬರ್ 27 ರಂದು ಬಂಧಿಸಿದ್ದರು.