ಬೆಂಗಳೂರು :ರಾಜ್ಯದ ವಿವಿಧೆಡೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಚಿತ್ರಕಲಾ ಮತ್ತು ಕರಕುಶಲ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ 17 ಶಿಕ್ಷಕರನ್ನು ಸೇವೆಯಿಂದ ಬಿಡುಗಡೆಗೊಳಿಸದಂತೆ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ವಸತಿ ಶಾಲೆಯಲ್ಲಿ ಖಾಲಿಯಿರುವ ಚಿತ್ರಕಲಾ ಮತ್ತು ಕರಕುಶಲ ವಿಭಾಗದ ಶಿಕ್ಷಕರ ನೇಮಕಾತಿಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನಿಸಿದ್ದು ಉದ್ಯೋಗದಿಂದ ತಮ್ಮನ್ನು ಕೈಬಿಡಬಹುದೆಂಬ ಆತಂಕ ಎದುರಾಗಿ, ವಿಜಯಪುರದ ಇಂಡಿ ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕರಕುಶಲ ವಿಭಾಗದ ಶಿಕ್ಷಕಿ ರೇಣುಕಾ ರವೀಂದ್ರ ಮುಂಜಣ್ಣಿ ಸೇರಿ 17 ಶಿಕ್ಷಕರು ಹೈಕೋರ್ಟ್ ಮೊರೆ ಹೋಗಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್ ಅವರಿದ್ದ ನ್ಯಾಯಪೀಠ, ಅರ್ಜಿದಾರರನ್ನು ಸದ್ಯ ಕರ್ತವ್ಯದಿಂದ ಬಿಡುಗಡೆ ಮಾಡಬಾರದು ಎಂದು ಮಧ್ಯಂತರ ಆದೇಶ ನೀಡಿ, ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿತು. ವಿಚಾರಣೆಯಲ್ಲಿ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕೆಆರ್‌ಇಐಎಸ್) ವಸತಿ ಶಾಲೆಗಳಲ್ಲಿ ಚಿತ್ರಕಲೆ ಮತ್ತು ಕರಕುಶಲ ಶಿಕ್ಷಕರಾಗಿ 2001-2002ರಿಂದ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಕಾರ್ಯನಿರ್ವಹಿಸುತ್ತಿದ್ದಾರೆ.