ಬೆಂಗಳೂರು:ಬಹುತೇಕ ಮಹಿಳೆಯರು ಪಿಸಿಒಡಿ ಹಾಗೂ ಋತುಚಕ್ರದ ಸಮಸ್ಯೆ ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರಿಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪೋರ್ಟಿಸ್ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಗಾಯತ್ರಿ ಕಾಮತ್ ತಿಳಿಸಿದರು.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಫೋರ್ಟಿಸ್ ಆಸ್ಪತ್ರೆ ಹಾಗೂ ವಿದ್ಯಾ ಫೌಂಡೇಷನ್ ಸಹಭಾಗಿತ್ವದಲ್ಲಿ 200ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡಾ. ಗಾಯತ್ರಿ ಕಾಮತ್, ಬಡ ಕುಟುಂಬದ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವುದು ಅಪರೂಪ. ಆರ್ಥಿಕ ಪರಿಸ್ಥಿತಿಯ ಕಾರಣ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಾರೆ.
ಹೀಗಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತವಾಗಿ ನಗರದ ವಿವಿಧೆಡೆ ತೆರಳಿ 200ಕ್ಕೂ ಹೆಚ್ಚು ಮಹಿಳೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಅದರಲ್ಲೂ ರಕ್ತ ಪರೀಕ್ಷೆ, ವಿಟಮಿನ್ ಡಿ, ಫಾಲಿಕ್ ಆಸಿಡ್, ಬಿ12 ಸೇರಿದಂತೆ ಇತರೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ:ಉಕ್ರೇನ್-ರಷ್ಯಾ ಯುದ್ಧ ಭಾರತದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ನಿರ್ಮಲಾ ಸೀತಾರಾಮನ್