ಬೆಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ ಎಸ್ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಮೃತರ ಸಹೋದರನಾದ ಡಾ. ರೇಣುಕಾ ಪ್ರಸಾದ್ ಸೇರಿದಂತೆ 6 ಮಂದಿಯನ್ನು ದೋಷಿಗಳು ಎಂದು ಹೈಕೋರ್ಟ್ ಘೋಷಣೆ ಮಾಡಿದೆ.
ಆರೋಪ ಸಂಬಂಧ ರೇಣುಕಾ ಪ್ರಸಾದ್ ಸೇರಿ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ (ಪುತ್ತೂರು ಉಪ ವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ) ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಪ್ರಕರಣದಲ್ಲಿದ್ದ ಏಳು ಮಂದಿ ಆರೋಪಿಗಳ ಪೈಕಿ ಡಾ ರೇಣುಕಾ ಪ್ರಸಾದ್, ಮನೋಜ್ ರೈ, ಎಚ್. ಆರ್, ನಾಗೇಶ್, ವಾಮನ ಪೂಜಾರಿ, ಶರಣ್ ಪೂಜಾರಿ ಮತ್ತು ಶಂಕರ ಅವರನ್ನು ಮೃತ ಎ. ಎಸ್ ರಾಮಕೃಷ್ಣ ಅವರ ಹತ್ಯೆ ಮತ್ತು ಕೊಲೆಗೆ ಒಳಸಂಚು ರೂಪಿಸಿದ ಪ್ರಕರಣದಲ್ಲಿ ದೋಷಿಗಳೆಂದು ನ್ಯಾಯಪೀಠ ಘೋಷಿಸಿದೆ. ಆದರೆ, ಏಳನೇ ಆರೋಪಿಯಾಗಿದ್ದ ಎಚ್. ಯು ನಾಗೇಶ್ ಕುಮಾರ್ ಅವರನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಇದೇ ವೇಳೆ ಮಾನ್ಯ ಆದೇಶಿಸಿದೆ. ಅಲ್ಲದೆ, ದೋಷಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವ ಕುರಿತು ಅ. 5 ರಂದು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ.
ಪ್ರಕರಣದ ಹಿನ್ನೆಲೆ ಏನು? : ಕುರುಂಜಿ ವೆಂಕಟರಮಣ ಗೌಡ ಅವರು ಕೆವಿಜಿ ಅಕಾಡೆಮಿ ಆಫ್ ಲಿಬೆರಲ್ ಎಜುಕೇಷನ್ ಸ್ಪ್ಲಿಂಟರ್ ಇನ್‌ಸ್ಟಿಟ್ಯೂಷನ್ಸ್ ಸಂಸ್ಥಾಪಕರಾಗಿದ್ದಾರೆ. ವಯಸ್ಸಾದ ಮತ್ತು ಅನಾರೋಗ್ಯ ಕಾಡಿದ ಕಾರಣ ಶೈಕ್ಷಣಿಕ ಸಂಸ್ಥೆಗಳ ನಿರ್ವಹಣೆ ಹೊಣೆಯನ್ನು ಹಿರಿಯ ಪುತ್ರ ಕೆ. ವಿ ಚಿದಾನಂದ ಮತ್ತು ಕಿರಿಯ ಪುತ್ರ ರೇಣುಕಾ ಪ್ರಸಾದ್ ಅವರಿಗೆ ವಿಭಜನೆ ಮಾಡಿ ಹಂಚಲಾಗಿತ್ತು. ಇದರೊಂದಿಗೆ ಮತ್ತೋರ್ವ ಪುತ್ರ ಎ. ಎಸ್ ರಾಮಕೃಷ್ಣ ಅವರು ಕೆವಿಜಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು.