ಬೆಂಗಳೂರು: ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 26ಕ್ಕೆ ಮುಂದೂಡಿದೆ.
ಪ್ರಕರಣದ ಆರೋಪಿ ಶಿವಮೂರ್ತಿ ಶರಣರು ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಪರಿಶೀಲಿಸಿ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ನಿಗದಿ ಪಡಿಸಬೇಕು. ಹಿರಿಯ ವಕೀಲರು ಖುದ್ದು ಹಾಜರಾಗಿ ವಾದ ಮಂಡಿಸಲಿದ್ದಾರೆ ಎಂದು ಮನವಿ ಮಾಡಿದರು.
ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಗೆ ಪ್ರತಿವಾರ ದಿನಾಂಕ ನಿಗದಿಯಾಗುತ್ತಿದೆ. ಆದರೆ, ಪದೇ ಪದೆ ವಿಚಾರಣೆ ಮುಂದೂಡಲು ಮನವಿ ಮಾಡಲಾಗುತ್ತಿದೆ. ಹೀಗಾಗಿ ದಸರಾ ಹಬ್ಬದ ಬಳಿಕ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿದೆ. ಸಂತ್ರಸ್ತ ವಿದ್ಯಾರ್ಥಿನಿಯರ ಪರವಾಗಿ ವಕಾಲತ್ತು ಹಾಕುವುದಾಗಿ ವಕೀಲ ಬಿ ಸಿ ಶ್ರೀನಿವಾಸ್ ಹೇಳಿದರು.
ಪ್ರಕರಣದ ಹಿನ್ನೆಲೆ ಏನು?: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ಪೊಕ್ಸೊ ಕಾಯ್ದೆ 2012 , ಭಾರತೀಯ ದಂಡ ಸಂಹಿತೆ 1860 , ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988 , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ 1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆ 2015 ರ ವಿವಿಧ ಕಲಂಗಳ ಅಡಿ ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ 2022 ರ ಆಗಸ್ಟ್ 26ರಂದು ಪ್ರಕರಣ ದಾಖಲಿಸಲಾಗಿತ್ತು.
ನಂತರ ಪೊಲೀಸರು ಶಿವಮೂರ್ತಿ ಶರಣರನ್ನು 2022 ರ ಸೆಪ್ಟೆಂಬರ್ 1ರಂದು ಚಿತ್ರದುರ್ಗದ ಬೃಹನ್ಮಠದಲ್ಲಿ ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಇದನ್ನೂಓದಿ:ಮಹಿಳೆಯರ ಮೇಲಿನ ದೌರ್ಜನ್ಯ.. ಅರಣ್ಯ, ಪೊಲೀಸ್ ಸಿಬ್ಬಂದಿ ಸೇರಿ 215 ಆರೋಪಿಗಳ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್