ಬೆಂಗಳೂರು: ಲೈಂಗಿಕ ಕಿರುಕುಳ ಆರೋಪ ಸಂಬಂಧ ಬಂಧನಕ್ಕೊಳಗಾಗಿ ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ. ಈ ಕುರಿತ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠವು ತೀರ್ಪು ಪ್ರಕಟಿಸಲಿದೆ.
ಈ ಹಿಂದೆ ನಡೆದ ವಿಚಾರಣೆಯಲ್ಲಿ ದೂರು ಸಲ್ಲಿಸಲು ಸಂತ್ರಸ್ತರಿಗೆ ನೆರವಾಗಿದ್ದ ಒಡನಾಡಿ ಸೇವಾ ಸಂಸ್ಥೆಯ ಪರ ವಕೀಲ ಡಿ.ಸಿ.ಶ್ರೀನಿವಾಸ್ ವಾದಿಸಿ, ಪ್ರಕರಣದಲ್ಲಿ ಆರೋಪಿಯಾಗಿರುವ ಶರಣರು ಪ್ರಭಾವಿ ವ್ಯಕ್ತಿ. ಅವರಿಗೆ ಜಾಮೀನು ನೀಡಿದರೆ ಪ್ರಕರಣದಲ್ಲಿನ ಸಂತ್ರಸ್ತರಾದ ಬಡ ಮಕ್ಕಳಿಗೆ ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಶರಣರು ತಮ್ಮನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂಬುದಾಗಿ ಸಂತ್ರಸ್ತರು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಸ್ವಯಂಕೃತ ಹೇಳಿಕೆ ದಾಖಲಿಸಿದ್ದಾರೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಶರಣರಿಗೆ ಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರು.
ಸರ್ಕಾರಿ ಅಭಿಯೋಜಕರು ವಾದ ಮಂಡಿಸಿ, ಶಿವಮೂರ್ತಿ ಶರಣರು ತಮ್ಮ ಮಠದಲ್ಲಿನ ಹಾಸ್ಟೆಲ್‌ನ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಶೋಷಿಸಿರುವುದು ತನಿಖೆಯ ವೇಳೆ ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ಕೋರಿದ್ದರು.