ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯ ಹಾಗೂ ಅದರ ಸಂಯೋಜಿತ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಯುಜಿಸಿ ಮಾರ್ಗಸೂಚಿಗಳ ಅನ್ವಯ ಗೌರವಧನ ಪಾವತಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮತ್ತು ವಿಶ್ವವಿದ್ಯಾಲಯದ ಮೇಲಿನ ನ್ಯಾಯಾಂಗ ನಿಂದನೆ ಪ್ರಕ್ರಿಯೆಯನ್ನು ಹೈಕೋರ್ಟ್ ಕೈಬಿಟ್ಟಿದೆ. ಡಾ ಎಸ್ ಶ್ವೇತಾ ಸೇರಿದಂತೆ ಮೈಸೂರು ವಿಶ್ವವಿದ್ಯಾಲಯ, ಮಹಾರಾಜ ಮತ್ತು ಯುವರಾಜ ಕಾಲೇಜಿನ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 10 ಮಂದಿ ಅತಿಥಿ ಉಪನ್ಯಾಸಕರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಕಿಣಗಿ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ) 2019ರ ಜನವರಿ 28 ರಂದು ಪ್ರಕಟಿಸಿದ ಮಾರ್ಗಸೂಚಿಗಳ ಅನುಸಾರ ಅರ್ಜಿದಾರರಿಗೆ ಗೌರವಧನ ಪಾವತಿಸುವ ವಿಚಾರವನ್ನು ಮೈಸೂರು ವಿಶ್ವವಿದ್ಯಾಲಯವು ಮೂರು ವಾರದಲ್ಲಿ ಪರಿಗಣಿಸಬೇಕು. ಈ ವೇಳೆ ಯುಜಿಸಿ ಮಾರ್ಗಸೂಚಿಗಳ ಬಗ್ಗೆ ಗಮನ ಹರಿಸಬೇಕು. ಒಂದೊಮ್ಮೆ ಗೌರವಧನ ಪಡೆಯಲು ಅರ್ಜಿದಾರರು ಅರ್ಹರಾಗಿದ್ದಾರೆ ಎಂಬ ತೀರ್ಮಾನಕ್ಕೆ ಬಂದಲ್ಲಿ, ಕೂಡಲೇ ಗೌರವಧನ ಪಾವತಿಗೆ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಏಕ ಸದಸ್ಯಪೀಠ 2022ರ ಸೆಪ್ಟೆಂಬರ್ 28ರಂದು ಮಧ್ಯಂತರ ಆದೇಶ ಹೊರಡಿಸಿತ್ತು ಎಂದು ವಿಭಾಗೀಯ ಪೀಠ ಆದೇಶದಲ್ಲಿ ಉಲ್ಲೇಖಿಸಿದೆ.
ಇದನ್ನೂ ಓದಿ :ರಾಜ್ಯದಲ್ಲಿ ಜನವಸತಿ ಇಲ್ಲದ ಗ್ರಾಮಗಳ ಪಟ್ಟಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ