ಬೆಂಗಳೂರು:ವಿಜಯಪುರ ನಗರ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶನಿವಾರ ತಡರಾತ್ರಿ ಕೇಳಿಬಂದಿರುವ ದೊಡ್ಡ ಶಬ್ದದ ಬಗ್ಗೆ ಸೂಕ್ತ ಅಧ್ಯಯನ ನಡೆಸಿ ವರದಿ ನೀಡಲು ಭೂರ್ಗರ್ಭ ಶಾಸ್ತ್ರಜ್ಞರು ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ರಾಜ್ಯದ ವಿಪತ್ತು ನಿರ್ವಹಣಾ ಘಟಕಕ್ಕೆ ಈಗಾಗಲೇ ಸೂಚನೆ ನೀಡಲಾಗಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಬೆಂಗಳೂರಿನಿಂದ ವಿಪತ್ತು ನಿರ್ವಹಣಾ ತಂಡ ವಿಜಯಪುರಕ್ಕೆ ಆಗಮಿಸಲಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜೊಲ್ಲೆ, ಶನಿವಾರ ರಾತ್ರಿ 11.47ರ ಸುಮಾರಿಗೆ ವಿಜಯಪುರ ನಗರ, ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ, ತಾಳಿಕೋಟೆ, ಮುದ್ದೇಬಿಹಾಳ ತಾಲೂಕಿನ ಹಲವು ಕಡೆಗಳಲ್ಲಿ ಭೂಕಂಪನ ಮಾದರಿಯಲ್ಲಿ ದೊಡ್ಡ ಶಬ್ದ ಕೇಳಿದೆ. ಈ ಹಿನ್ನೆಲೆಯಲ್ಲಿ ಭಯಭೀತರಾದ ಜನರು ರಾತ್ರಿ ಮನೆಯ ಹೊರಗೆ ಬಂದು ಕುಳಿತಿರುವ ಬಗ್ಗೆ ವಿಜಯಪುರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಕ್ಷಣ ದೂರವಾಣಿ ಕರೆ ಮಾಡಿ ಚರ್ಚಿಸಿದ್ದೇನೆ. ಯಾವುದೇ ರೀತಿಯ ಪ್ರಾಣ ಹಾನಿಯಾಗದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.