ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದು ತೆರವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ಆಯ್ಕೆಯಾಗಿದ್ದಾರೆ.
ರಾಜ್ಯ ಬಿಜೆಪಿಗೆ ನೂತನ ಸಾರಥಿ: ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ - ಬಿಜೆಪಿ ರಾಜಾಧ್ಯಕ್ಷ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ಆಯ್ಕೆ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.
ರಾಜ್ಯ ಬಿಜೆಪಿಗೆ ಅಧ್ಯಕ್ಷ ಸ್ಥಾನ ಅಲಂಕರಿಸಲು ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಸಿಟಿ ರವಿ, ಶೋಭಾ ಕರಂದ್ಲಾಜೆ, ಆರ್. ಅಶೋಕ್ ಸೇರಿದಂತೆ ಹಲವು ಹಿರಿಯ ನಾಯಕರು ತೀವ್ರ ಪೈಪೋಟಿ ನಡೆಸುತ್ತಿದ್ದರು. ಆದರೆ ಅಂತಿಮವಾಗಿ ಬಿಜೆಪಿ ಹೈಕಮಾಂಡ್ ನಳಿನ್ ಕುಮಾರ್ ಕಟೀಲ್ಗೆ ಮಣೆ ಹಾಕಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ನರೇಂದ್ರ ಮೋದಿ ಅಲೆಯಲ್ಲಿ 2,74,621 ಮತಗಳ ಅಂತರದಿಂದ ಮೂರನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದಾರೆ. ಕಟೀಲ್ 7,74,285 ಮತಗಳನ್ನು ಪಡೆದರೆ, ಕಾಂಗ್ರೆಸ್ಸಿನ ಮಿಥುನ್ ರೈ 4,99,664 ಮತಗಳನ್ನು ಪಡೆದಿದ್ದರು.