ಬೆಂಗಳೂರು:ಭಾನುವಾರ(ನಾಳೆ) ನೇರಳೆ ಮೆಟ್ರೋ ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್ಸಿಎಲ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಕೃಷ್ಣರಾಜಪುರದಿಂದ ಬೈಯಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚೆಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವೆ ವಿಸ್ತರಣೆ ಮಾರ್ಗಗಳನ್ನು ಸುರಕ್ಷತಾ ಪರೀಕ್ಷೆಗಳನ್ನು ಭಾನುವಾರ ನಡೆಸಲಾಗುವುದು. ವಿವರವಾದ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳಲು ಹೆಚ್ಚಿನ ಸಮಯದ ಅಗತ್ಯವಿದೆ. ಈ ನಿಟ್ಟಿನಲ್ಲಿ ರೈಲು ಸೇವೆಗಳನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ಸಂಸ್ಥೆ ಹೇಳಿದೆ.
ಹೀಗಾಗಿ ಭಾನುವಾರ ಮೈಸೂರು ರಸ್ತೆ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ, ಬೈಯಪ್ಪನಹಳ್ಳಿ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆನ ಹಾಗೂ ವೈಟ್‌ಫೀಲ್ಡ್ (ಕಾಡುಗೋಡಿ) ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆ ಇರುವುದಿಲ್ಲ. ಭಾನುವಾರದಂದು ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸ್ವಾಮಿ ವಿವೇಕಾನಂದ ರಸ್ತೆ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ಸೇವೆಗಳು ಲಭ್ಯವಿರುತ್ತದೆ.
ಮಧ್ಯಾಹ್ನ 1 ಗಂಟೆಯ ನಂತರ, ಬೈಯಪ್ಪನಹಳ್ಳಿಯಿಂದ ಕೆಂಗೇರಿ ಮೆಟ್ರೋ ನಿಲ್ದಾಣದವರೆಗೆ ಮತ್ತು ಕೃಷ್ಣರಾಜಪುರದಿಂದ ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣದವರೆಗೆ ಎಂದಿನಂತೆ ರಾತ್ರಿ 11 ಗಂಟೆಯವರೆಗೆ ವಾಣಿಜ್ಯ ಸೇವೆಗಳು ಲಭ್ಯವಿರುತ್ತದೆ. ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್ಸಿಎಲ್ ಪತ್ರಿಕಾ ಪ್ರಕಟಣೆ ಹೊರಡಿಸಿದೆ.