ಬೆಂಗಳೂರು:ಲಾಕ್ಡೌನ್ ಅವಧಿಯಲ್ಲಿ ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಾಂತ್ವನ ಕೇಂದ್ರಗಳ ಮೂಲಕ ತಜ್ಞರಿಂದ ಆಪ್ತ ಸಮಾಲೋಚನೆ ಮಾಡಿಸಲಾಗುತ್ತಿದೆ. ಹಾಗೆಯೇ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಸಾಂಸ್ಥಿಕ ಪುನರ್ವಸತಿ ಕಲ್ಪಿಸಲು 'ಸ್ವಧಾರ ಗೃಹ' ಹೆಸರಲ್ಲಿ ತಾತ್ಕಾಲಿಕ ಆಶ್ರಯ ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಕಳೆದ ವಿಚಾರಣೆ ವೇಳೆ ಲಾಕ್ಡೌನ್ ಜಾರಿ ಮಾಡಿದ ಬಳಿಕ ಹೆಚ್ಚುತ್ತಿರುವ ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಕೇಳಿತ್ತು.
ಈ ಕುರಿತು ಸರ್ಕಾರದ ಪರ ವಕೀಲ ವಿಕ್ರಂ ಹುಯಿಲ್ಗೋಳ ಅವರು ಪೀಠಕ್ಕೆ ಲಿಖಿತ ಮಾಹಿತಿ ನೀಡಿ, ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಪ್ರಕಾರ ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿಯಂತ್ರಣ ಹಾಗೂ ನಿರ್ವಹಣೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ-2005ರ ಪ್ರಕಾರ ರಾಜ್ಯ ಸರ್ಕಾರ ಪ್ರಕರಣಗಳನ್ನು ನಿರ್ವಹಿಸಲು 18 ಮಂದಿ ಸಂರಕ್ಷಣಾ ಅಧಿಕಾರಿಗಳನ್ನು ನೇಮಿಸಿದೆ. ಅದೇ ರೀತಿ 186 ಮಂದಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸಂರಕ್ಷಣಾ ಅಧಿಕಾರಿಗಳ ಹೆಚ್ಚುವರಿ ಹೊಣೆ ನೀಡಲಾಗಿದೆ. ಈ ಎಲ್ಲಾ ಅಧಿಕಾರಿಗಳು ಲಾಕ್ಡೌನ್ ಅವಧಿಯಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ನಿರ್ವಹಿಸಲು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ಆಪ್ತ ಸಮಾಲೋಚನೆ, ಕಾನೂನು ನೆರವು ಮತ್ತು ವೈದ್ಯಕೀಯ ನೆರವು ಒದಗಿಸಲು ರಾಜ್ಯ ಸರ್ಕಾರ 'ಸಾಂತ್ವನ' ಯೋಜನೆ ಜಾರಿಗೆ ತಂದಿದೆ.
ರಾಜ್ಯದ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ 193 ಸಾಂತ್ವನ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ. ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಮಹಿಳಾ ಸಹಾಯವಾಣಿಗೆ ಮಾ. 23ರಿಂದ ಏ. 21ರವರೆಗೆ ಒಟ್ಟು 1,194 ಕರೆಗಳು ಬಂದಿದ್ದು, ಅದರಲ್ಲಿ 162 ಕರೆಗಳು ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕರೆಗಳಾಗಿವೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಫೋನ್ ಮೂಲಕವೇ ಆಪ್ತ ಸಮಾಲೋಚನೆ ನಡೆಸಲಾಗುತ್ತಿದೆ. ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಏ. 11ರಂದು ನೀಡಿರುವ ನಿರ್ದೇಶನದಂತೆ ಸಂತ್ರಸ್ತರಿಗೆ ಕಾನೂನು ನೆರವು ನೀಡಲು 'ಒನ್ ಸ್ಟಾಪ್ ಸೆಂಟರ್' ಹಾಗೂ ಹೆಲ್ಪ್ ಲೈನ್ ಆರಂಭಿಸಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಮಟ್ಟದಲ್ಲಿ ತಲಾ ಇಬ್ಬರು ಮಹಿಳಾ ವಕೀಲರನ್ನು ನೇಮಕ ಮಾಡಿ, ಅವರ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಿಗೆ ನೀಡಲಾಗಿದೆ ಎಂದು ಸರ್ಕಾರ ಪೀಠಕ್ಕೆ ಮಾಹಿತಿ ನೀಡಿದೆ.