ಬೆಂಗಳೂರು:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಹಾಗೂ ನಿಯಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸುತ್ತಿರುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇಲ್ಲಿನ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನೆ ಸಂಸ್ಥೆ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.
ಸರ್ಕಾರವನ್ನು ತರಾಟೆ ತೆಗೆದುಕೊಂಡ ಹೈಕೋರ್ಟ್: ''ಕಾಯ್ದೆ ಮತ್ತು ನಿಯಮಗಳ ಅಡಿಯಲ್ಲಿನ ನಿಬಂಧನೆಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿರಬೇಕು. ಕೇವಲ ಮೂಕ ಪ್ರೇಕ್ಷಕನಾಗಿರಲು ಸಾಧ್ಯವಿಲ್ಲ'' ಎಂದು ಹೇಳಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ರೂಪಿಸಿರುವ ನಿಯಮಗಳನ್ನು ಅನುಷ್ಠಾನಕ್ಕೆ ತರದ ಸರ್ಕಾರದ ಕ್ರಮವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.
ಸರ್ಕಾರ ವಿರುದ್ಧ ಗರಂ ನ್ಯಾಯ ಪೀಠ ಆಕ್ರೋಶ: ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠಕ್ಕೆ ರಾಜ್ಯ ಸರ್ಕಾರದ ಪರ ವಕೀಲರು ದಿನಾಂಕ ನಿಗದಿ ಪಡಿಸಿದ್ದು, ಸಭೆ ನಡೆಸುವುದಾಗಿ ಹೇಳಿದ್ದರು. ಆದರೆ, ದಿನಾಂಕ ನಿಗದಿಯಾಗಿದ್ದರೂ ಸಭೆ ನಡೆಸಿರಲಿಲ್ಲ. ಇದರಿಂದ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಸರ್ಕಾರ ವಿರುದ್ಧ ಗರಂ ಆಗಿದೆ. ನಿಯಮ 60ರ ಅಡಿಯಲ್ಲಿ ಪರಿಗಣಿಸಿ, ಉನ್ನತ ಅಧಿಕಾರದ ವಿಚಕ್ಷಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಶಾಸನಬದ್ಧ ಸಭೆಗಳ ಕುರಿತು ರಾಜ್ಯ ಸರ್ಕಾರವು ಒದಗಿಸಿದ ಪ್ರಮಾಣಪತ್ರ ಮತ್ತು ಪಟ್ಟಿಯನ್ನು ನ್ಯಾಯಾಲಯವು ಪರಿಶೀಲಿಸಿತು.