ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಸರ್ಕಾರಿ ಶಾಲಾ ವ್ಯವಸ್ಥೆಯನ್ನು ಬಲಪಡಿಸಲಿದೆ. ಈ ಶಿಕ್ಷಣ ನೀತಿಯಡಿ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಶಿಕ್ಷಣ, ವೃತ್ತಿಪರ ಶಿಕ್ಷಣಕ್ಕೆ ಒತ್ತು ನೀಡಿ, ವಿಶೇಷ ಕ್ರಿಯಾಯೋಜನೆ ಸಿದ್ದಪಡಿಸುವಂತೆ ಸಮಾಜ ಕಲ್ಯಾಣ ಸಚಿವರೂ ಆದ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸಂಜೆ ಸಮಾಜಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನ ಕುರಿತು ಸಭೆ ನಡೆಸಿದರು. ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಹೆಚ್ಚಿನ ಪ್ರಮಾಣದಲ್ಲಿ ಸರ್ಕಾರಿ ಶಾಲೆಗಳನ್ನು ಅವಲಂಬಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡಲು ಈ ಶಿಕ್ಷಣ ನೀತಿಯಡಿ ವಿಫುಲ ಅವಕಾಶಗಳಿವೆ. ಈ ಎಲ್ಲಾ ಅವಕಾಶಗಳು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಸದ್ಬಳಕೆಯಾಗಿ, ಪರಿಣಾಮಕಾರಿ ಉನ್ನತ ಹಾಗೂ ವೃತ್ತಿಪರ ಶಿಕ್ಷಣ ಪಡೆದು ಸ್ವಾವಲಂಬಿಗಳಾಗುವಂತಹ ಕ್ರಿಯಾ ಯೋಜನೆ ಸಿದ್ದಪಡಿಸಬೇಕು ಎಂದರು.
ಪರಿಶಿಷ್ಟ ಜಾತಿ-ಪಂಗಡ ಹಾಗೂ ಹಿಂದುಳಿದ ವರ್ಗಗಳು ಪ್ರಾತಿನಿದ್ಯ ಕಡಿಮೆ ಇರುವ ಗುಂಪಿನಲ್ಲಿ (ಯುಆರ್ ಜಿ) ಬರುವುದರಿಂದ, ಸಂವಿಧಾನದ ಆಶಯದಂತೆ ಈ ಸಮುದಾಯಗಳಿಗೆ ವಿಶೇಷ ಆದ್ಯತೆ ನೀಡಿ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚಿಸಿದರು. ಈ ನೀತಿಯಡಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಾದೇಶಿಕ ಅಸಮಾನತೆ ನಿವಾರಣೆಗಾಗಿ ವಿಶೇಷ ಶೈಕ್ಷಣಿಕ ವಲಯ( ಎಸ್‍ಇಝಡ್) ರಚನೆ ಕುರಿತು ಪ್ರಸ್ತಾಪಿಸಲಾಗಿದೆ. ಇದರ ಜಾರಿಗೆ ಒತ್ತು ನೀಡಬೇಕಿದೆ. ಪರಿಶಿಷ್ಟ ಜಾತಿ-ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಶಿಕ್ಷಕ ವೃಂದಕ್ಕೆ ವೃತ್ತಿಪರ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸಬೇಕು. ಶಿಕ್ಷಕರ ಶಿಕ್ಷಣ ಹಾಗೂ ನೇಮಕಾತಿಗಾಗಿ ವಿಶೇಷ ಒತ್ತು ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಮಲ್ಟಿಪಲ್ ಎಂಟ್ರಿ ಮತ್ತು ಮಲ್ಟಿಪಲ್ ಎಕ್ಸಿಟ್‌ನಿಂದಾಗಿ ಶಾಲೆಯಿಂದ ಹೊರಗುಳಿಯುವವರ (ಡ್ರಾಪ್ ಔಟ್) ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ.
ಪರಿಶಿಷ್ಠ ಜಾತಿ ಮತ್ತು ಪಂಗಡ ಸಮುದಾಯದವರು ಹೆಚ್ಚಿನ ಪ್ರಮಾಣದಲ್ಲಿ ವಲಸೆ ಹೋಗುವುದರಿಂದ ಅವರ ಮಕ್ಕಳು ಶಿಕ್ಷಣ ವಂಚಿತರಾಗುತ್ತಿದ್ದಾರೆ. ಎಸ್‍ಸಿಪಿ ಮತ್ತು ಟಿಎಸ್‍ಪಿ ಅನುದಾನವನ್ನು ಈ ನಿಟ್ಟಿನಲ್ಲಿ ವಿನಿಯೋಗಿಸುವ ಕುರಿತು ಸುಧೀರ್ಘವಾಗಿ ಚರ್ಚಿಸಿದರು.
ಕರ್ನಾಟಕದಲ್ಲಿರುವ ವಸತಿ ಶಿಕ್ಷಣ ವ್ಯವಸ್ಥೆಯನ್ನು ಮಾದರಿ ಎಂದು ಈ ಶಿಕ್ಷಣ ನೀತಿಯಲ್ಲಿ ಉಲ್ಲೇಖಿಸಲಾಗಿದ್ದು, ಇದೇ ಮಾದರಿಯನ್ನು ಎಲ್ಲಾ ರಾಜ್ಯಗಳಲ್ಲಿ ಅನುಷ್ಠಾನಗೊಳಿಸುವಂತೆ ಪ್ರಸ್ತಾಪಿಸಲಾಗಿದೆ. ವಸತಿ ಶಿಕ್ಷಣ ವ್ಯವಸ್ಥೆಯಿಂದ ಕರ್ನಾಟಕದಲ್ಲಿ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯುವ (ಡ್ರಾಪ್ ಔಟ್) ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ವಸತಿ ಶಿಕ್ಷಣ ಶಾಲೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪಿಸಿದರೆ ಮಕ್ಕಳು ಶಾಲೆಯಿಂದ ಹೊರಗುಳಿಯುವ ಸಮಸ್ಯೆ ತಾನಾಗಿಯೇ ನಿವಾರಣೆಯಾಗುತ್ತದೆ.
ಪೂರ್ವ ಪ್ರಾಥಮಿಕ ಹಂತದ ಚಿಕ್ಕಮಕ್ಕಳಿಗೆ ಹೋಮ್ ಸ್ಕೂಲಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಗುಣಾತ್ಮಕ ಶಿಕ್ಷಣದಿಂದ ಪ್ರಾದೇಶಿಕ ಅಸಮಾನತೆ ನಿವಾರಣೆಗೆ ನಾಂದಿಯಾಗುತ್ತದೆ. ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ ಸೇವಾ ಮನೋಭಾವ ಮೂಡುವಂತೆ ಪ್ರೇರೇಪಿಸಬೇಕು ಎಂದು ಡಿಸಿಎಂ ತಿಳಿಸಿದರು. ಹೊಸ ಶಿಕ್ಷಣ ನೀತಿಯಂತೆ ವಸತಿ ಶಿಕ್ಷಣ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಬೇಕು. ಸ್ವಂತ ನಿವೇಶನ ಹೊಂದಿರುವ ವಸತಿ ಶಾಲೆಗಳಲ್ಲಿ ಹೆಚ್ಚುವರಿ ಶಾಲಾ ಕೊಠಡಿ, ವಸತಿ ಕೊಠಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ, ಈಗಿರುವ 1.7 ಲಕ್ಷ ವಿದ್ಯಾರ್ಥಿಗಳ ಸಂಖ್ಯೆಯನ್ನು 2.5 ಲಕ್ಷಕ್ಕೆ ವಿಸ್ತರಿಸಲು ಕ್ರಮಕೈಗೊಳ್ಳಬೇಕು ಎಂದು ಕ್ರೈಸ್ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಸೂಚಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಸದಸ್ಯರೂ ಆಗಿರುವ ವಿಧಾನ ಪರಿಷತ್ ಸದಸ್ಯ ಅರುಣ್ ಶಹಪೂರ್ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಮುಖ ಅಂಶಗಳ ಕುರಿತು ವಿವರಿಸಿ, ಈ ಶಿಕ್ಷಣ ನೀತಿಯು ಎಲ್ಲಾ ವಯೋಮಾನ, ಎಲ್ಲಾ ಪ್ರದೇಶಗಳನ್ನು ಗಮನದಲ್ಲಿಟ್ಟುಕೊಂಡು ಸಿದ್ದಪಡಿಸಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮೂಡಿಸಲಿದೆ ಎಂದು ತಿಳಿಸಿದರು.