ಬೆಂಗಳೂರು:ರಾಜ್ಯ ಮೀಸಲು ಪೊಲೀಸ್ ಪಡೆ ಹುದ್ದೆಗಳ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಏಕೆ ಅವಕಾಶ ನೀಡಿಲ್ಲ ಎಂದು ಪ್ರಶ್ನಿಸಿರುವ ಹೈಕೋರ್ಟ್ ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ನೇಮಕಾತಿಯಲ್ಲಿ ಅವಕಾಶ ನೀಡದ ಕ್ರಮ ಪ್ರಶ್ನಿಸಿ ಲೈಂಗಿಕ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ದುಡಿಯುತ್ತಿರುವ ಸಂಗಮ ಹೆಸರಿನ ಸ್ವಯಂ ಸೇವಾಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿತು.
ಅಲ್ಲದೇ ಸರ್ಕಾರದ ಪರ ವಕೀಲರನ್ನು ಉದ್ದೇಶಿಸಿ, ಎಲ್ಲಾ ಸರ್ಕಾರಿ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೆ ಮೀಸಲು ಕಲ್ಪಿಸಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನವಿದೆ. ಹಾಗಿದ್ದೂ, ರಾಜ್ಯ ಮೀಸಲು ಪೇದೆಗಳ ಪಡೆ ಮತ್ತು ಬ್ಯಾಂಡ್ಸ್ ಮೆನ್ ಹುದ್ದೆಗಳ ನೇಮಕಾತಿಯಲ್ಲಿ ಏಕೆ ಮೀಸಲು ನೀಡುತ್ತಿಲ್ಲ ಎಂದು ಪ್ರಶ್ನಿಸಿತು. ಹಾಗೆಯೇ, ಮುಂದಿನ ವಿಚಾರಣೆ ವೇಳೆ ಈ ಕುರಿತು ವಿವರಣೆ ನೀಡುವಂತೆ ಸೂಚಿಸಿತು.
ಪ್ರಕರಣದ ಹಿನ್ನೆಲೆ:ರಾಜ್ಯ ಸರ್ಕಾರ ಇತ್ತೀಚೆಗೆ ಮೀಸಲು ಪೊಲೀಸ್ ಪೇದೆಗಳ ಪಡೆಯಲ್ಲಿ ಖಾಲಿಯಿರುವ 2,672 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆದರೆ, ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸಲು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿರುವ ಸರ್ಕಾರ, ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸಿಲ್ಲ.
ಇದನ್ನು ಆಕ್ಷೇಪಿಸಿರುವ ಅರ್ಜಿದಾರರು ಸರ್ಕಾರದ ಕ್ರಮ ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆಯಾಗಿದೆ. ಆದ್ದರಿಂದ ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ತೃತೀಯ ಲಿಂಗಿಗಳಿಗೆ ಅವಕಾಶ ಕಲ್ಪಿಸಲು ಹಾಗೂ ತೃತೀಯ ಲಿಂಗಿಗಳ ಸಮುದಾಯಕ್ಕೆ ಮೀಸಲಾತಿ ಯೋಜನೆ ರೂಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದ್ದಾರೆ.