ಬೆಂಗಳೂರು : ಬಿಎಸ್ಸಿಗೆ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮೂಲಕ ಪ್ರವೇಶ ನೀಡುವ ಚಿಂತನೆಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ. 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಎಲ್ಲ ಕುಲಪತಿಗಳ ಜತೆ ವಿಕಾಸಸೌಧದಲ್ಲಿ ಇಂದು ವರ್ಚುಯಲ್ ಚರ್ಚೆ ನಡೆಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ವಿಜ್ಞಾನ ಬೋಧನೆ ಮತ್ತು ಕಲಿಕೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪದವಿ ವಿಜ್ಞಾನ ಪ್ರವೇಶಕ್ಕೂ ಸಿಇಟಿ ತರುವ ಯೋಚನೆ ಇತ್ತು. ಆದರೆ, ಸದ್ಯಕ್ಕೆ ಕೈಬಿಡಲಾಗಿದೆ ಎಂದು ಹೇಳಿದರು.
ಪಿಯುಸಿ ಪಾಸಾದವರೆಲ್ಲ ಸಿಇಟಿ ಬರೆಯಬಹುದು : ಸಿಇಟಿ ಪರೀಕ್ಷೆ ಬಗ್ಗೆ ಹೈಕೋರ್ಟ್ ನೀಡಿರುವ ಸೂಚನೆ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಪ್ರಸಕ್ತ ವರ್ಷ ಪಿಯುಸಿ ಪಾಸಾದವರೆಲ್ಲ ಸಿಇಟಿ ಬರೆಯಬಹುದು. ನ್ಯಾಯಾಲಯ ನೀಡಿರುವ ಆದೇಶದ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ಸಚಿವರ ಜತೆ ಚರ್ಚೆ ನಡೆಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೋವಿಡ್ ಕಾರಣಕ್ಕೆ ಪ್ರಸಕ್ತ ವರ್ಷದಲ್ಲಿ ಪಿಯುಸಿ ವಿದ್ಯಾರ್ಥಿಗಳೆಲ್ಲರೂ ಪಾಸಾಗಿದ್ದಾರೆ. ವಿವಿಧ ಕೋರ್ಸ್ಗಳಿಗೆ ಬಹಳ ಬೇಡಿಕೆ ಬರುತ್ತಿದೆ. ವಿವಿಗಳಿಗೆ ಇದೊಂದು ಸುವರ್ಣಾವಕಾಶ. ನಾಲ್ಕು ವರ್ಷದ ಪದವಿ ತರಗತಿಗಳನ್ನು ಆರಂಭ ಮಾಡುವ ಮೂಲಕ ವಿವಿಗಳು ಪದವಿ ವ್ಯಾಸಂಗದ ಅಭಿಲಾಶೆಯುಳ್ಳ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಕುಲಪತಿಗಳಿಗೆ ಸೂಚಿಸಲಾಗಿದೆ ಎಂದರು.
ಎನ್‌ಇಪಿ ಜಾರಿಗೆ ವಿಷಯವಾರು ಸಮಿತಿ ರಚನೆ: ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಅದಕ್ಕೆ ಸೂಕ್ತವಾದ ʼಕಾರ್ಯ ಚೌಕಟ್ಟುʼ ರೂಪಿಸಲು ವಿಷಯವಾರು ಸಮಿತಿ ರಚನೆ ಮಾಡುವಂತೆಯೂ ಕುಲಪತಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಇನ್ನು, ಸದ್ಯಕ್ಕೆ ನಮ್ಮನ್ನು ಕಾಡುತ್ತಿರುವ ಈ ವೈರಸ್ ಎಷ್ಟು ಕಾಲ ಇರುತ್ತೋ ಇಲ್ಲವೋ ಗೊತ್ತಿಲ್ಲ. ಹೀಗಾಗಿ, ವಿದ್ಯಾರ್ಥಿಗಳು ಆನ್‌ಲೈನ್ ಮತ್ತು ಆಫ್ ಲೈನ್‌ನಲ್ಲಿ ಕಲಿಯಲು ಅವಕಾಶ ಇರಲೇಬೇಕು. ಅದಕ್ಕೆ ಬೇಕಾದ ಎಲ್ಲ ತಾಂತ್ರಿಕ ಸೌಲಭ್ಯಗಳು ವಿದ್ಯಾಸಂಸ್ಥೆಗಳಲ್ಲಿ ಇರಬೇಕು. ಡಿಜಿಟಲ್‌ನಿಂದ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವರ್ಚುವಲ್ ಮೂಲಕ ಬೋಧನೆ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.