ಮೈಸೂರು: ಬಿಜೆಪಿ ಶಾಸಕ ಮಾಡ್ನಾಳ್ ವಿರೂಪಾಕ್ಷಪ್ಪ ಪುತ್ರನ ಪ್ರಕರಣದಲ್ಲಿ, ಬಿಜೆಪಿ ಸರ್ಕಾರ 40% ಕಮಿಷನ್ ಎಂಬುದಕ್ಕೆ ಸಾಕ್ಷಿ ಸಿಕ್ಕಿದೆ, ಇದಕ್ಕೆ ನೈತಿಕ ಹೊಣೆ ಹೊತ್ತು ಸಿಎಂ ರಾಜಿನಾಮೆ ನೀಡಬೇಕು ಎಂಬ ಡಿ ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಡಿ ಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿ ಬಂದಿದ್ದಾರೆ. ಇಂತವರ ಪ್ರಶ್ನೆಗೆ ಉತ್ತರಿಸುವ ಅಗತ್ಯವಿಲ್ಲ. ಯಾರೇ ಆದರೂ ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು ಎಂದು ತಿರುಗೇಟು ನೀಡಿದ್ದಾರೆ.
ಇಂದು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ಈಶ್ವರಪ್ಪ, ಡಿಕೆಶಿ ಮನೆಯ ಮೇಲೆ ದಾಳಿ ಮಾಡಿದಾಗ ಕೊಟ್ಯಂತರ ರೂಪಾಯಿ ಹಣ ಸಿಕ್ಕಿದೆ. ಇಂತವರ ಮಾತಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಡಿಕೆಶಿ ಹೇಳಿಕೆಗೆ ಮಾಜಿ ಸಚಿವ ಹಾಗೂ ಶಾಸಕ ಈಶ್ವರಪ್ಪ ತಿರುಗೇಟು ನೀಡಿದರು.
ಸೋಮಣ್ಣ ಗೈರಿಗೆ ವಿಶೇಷ ಅರ್ಥ ಬೇಡ:ಮೊನ್ನೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಚಾಲನೆ ನೀಡಿದ್ದರು. ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವ ಸೋಮಣ್ಣ ಕಾರ್ಯಕ್ರಮಕ್ಕೆ ಗೈರಾಗಿದ್ದು. ಅವರಿಗೆ ಪೂರ್ವ ನಿಗದಿತ ಕಾರ್ಯಕ್ರಮ ಹಾಗೂ ಆರೋಗ್ಯ ಸಮಸ್ಯೆಯಿಂದ ಕಾರ್ಯಕ್ರಮಕ್ಕೆ ಭಾಗವಹಿಸಲಿಲ್ಲ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಯಾವುದೇ ಭಿನ್ನಮತ, ಅಸಮಾಧಾನ ಇಲ್ಲ ಎಂದರು.
ಬಿಜೆಪಿ ಸರ್ಕಾರ ನುಡಿದಂತೆ ನಡೆದಿದೆ. ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿದೆ. ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಎಸ್ಸಿ, ಎಸ್ಟಿ ಮಿಸಲಾತಿ ಪ್ರಮಾಣವನ್ನು ಹೆಚ್ಚು ಮಾಡಿದೆ. ಬಿಜೆಪಿ ನಡೆಸುತ್ತಿರುವ ವಿಜಯ ಸಂಕಲ್ಪ ಯಾತ್ರೆಗೆ ಜನ ನಿರೀಕ್ಷೆಗೂ ಮೀರಿ ಬರುತ್ತಿದ್ದಾರೆ. ರಾಜ್ಯದ ಜನ ನಮ್ಮ ಜೊತೆ ಇರುವುದು ಸ್ಪಷ್ಟವಾಗಿದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.