ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ತೊರೆದು, ಕಾಂಗ್ರೆಸ್ ಸೇರುತ್ತೇನೆ ಎಂಬುದು ಕೇವಲ ವದಂತಿ ಅಷ್ಟೇ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣ ಗೌಡ ಅವರು ಸ್ಪಷ್ಟನೆ ನೀಡಿದ್ದಾರೆ. ಕೆ.ಆರ್ ಪೇಟೆಯ ಹೊನ್ನೆನಹಳ್ಳಿಯಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರ ಕುರಿತು ಹೇಳಿರುವ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ಕಾರ್ಯಕ್ರಮದಲ್ಲಿ ಸಾಂದರ್ಭಿಕವಾಗಿ ಸಿದ್ದರಾಮಯ್ಯ ಅವರ ಬಗ್ಗೆ ಉಲ್ಲೇಖಿಸಲಾಯಿತು. ಅಂದ ಮಾತ್ರಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತೇನೆ ಎಂದಲ್ಲ. ನನಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಸಮಾನ ಎದುರಾಳಿಗಳು ಎಂದು ಬಿಜೆಪಿ ತೊರೆಯುವ ಸುದ್ದಿಯನ್ನು ತಳ್ಳಿ ಹಾಕಿದರು.
ಕಾಂಗ್ರೆಸ್- ಜೆಡಿಎಸ್‌ಗೆ ತಕ್ಕ ಪಾಠ:ಕೆ.ಆರ್ ಪೇಟೆಯಲ್ಲಿ ಕಮಲ ಅರಳಿಸುವ ಮೂಲಕ ಮಂಡ್ಯದಲ್ಲಿ ಬಿಜೆಪಿ ಖಾತೆ ತೆರೆದ ನನಗೆ ಪಕ್ಷ ಎಲ್ಲವನ್ನೂ ನೀಡಿದೆ. ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡ್ಮೂರು ಖಾತೆಗಳನ್ನು ನೀಡುವುದರ ಜೊತೆಗೆ ಕೆ.ಆರ್ ಪೇಟೆ ಕ್ಷೇತ್ರದ ಅಭಿವೃದ್ಧಿಗೆ 2 ಸಾವಿರ ಕೋಟಿಗೂ ಹೆಚ್ಚಿನ ಅನುದಾನವನ್ನು ನೀಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಡಬಲ್ ಎಂಜಿನ್ ಸರ್ಕಾರದಲ್ಲಿ ಯಡಿಯೂರಪ್ಪ ಮಾರ್ಗದರ್ಶನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ಕ್ಷೇತ್ರದ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪಣ ತೊಡಲಾಗಿದೆ.