ಬೆಂಗಳೂರು: ಮುಖ್ಯಮಂತ್ರಿಗಳ ಗೃಹ ಕಚೇರಿ ಮುಂದೆ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.
ಹೈಗ್ರೌಂಡ್ಸ್ ಪೊಲೀಸರ ದಾಖಲಿಸಿರುವ ಪ್ರಕರಣದ ವಿಚಾರಣೆ ನಡೆಸಿದ ನಗರದ 69ನೇ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ರಹಿತ ವಾರಂಟ್ ಜಾರಿ ಮಾಡಿ ವಿಚಾರಣೆ ಮುಂದೂಡಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಆರೋಪಿತರಿಗೆ ಈಗಾಗಲೇ ಎರಡು ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಈವರೆಗೂ ಹಾಜರಾಗದ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿಸಿದ್ದು ವಿಚಾರಣೆಯನ್ನು ಡಿಸೆಂಬರ್ 27ಕ್ಕೆ ಮುಂದೂಡಿದೆ.