ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆ ಕೊರತೆ ನೀಗಿಸುವ ಉದ್ದೇಶದಿಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಭೀರವಲ್ಲದ ಸೋಂಕಿತರನ್ನು ಸ್ಟೆಪ್ ಡೌನ್ ಆಸ್ಪತ್ರೆ ಇಲ್ಲವೇ ಕೋವಿಡ್ ಕೇರ್ ಸೆಂಟರ್‌ಗಳಿಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಲಾಗಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಾಣ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ʼಕೋವಿಡ್ ಚಿಕಿತ್ಸೆ ಶಿಷ್ಟಾಚಾರ ಸಮಿತಿʼ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ತಜ್ಞರು ಕೊಟ್ಟ ವರದಿ ಪ್ರಕಾರ ಶೇ.30ರಿಂದ 40ರಷ್ಟು ಗಂಭೀರವಲ್ಲದ ಸೋಂಕಿತರು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ಇವರೆಲ್ಲರನ್ನೂ ಸ್ಟೆಪ್‌ಡೌನ್ ಆಸ್ಪತ್ರೆಗಳಿಗೆ ಶಿಫ್ಟ್ ಮಾಡುವ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
ಸ್ಯಾಚುರೇಷನ್ ಕಡಿಮೆಯಾದವರಿಗೆ ಮಾತ್ರ ಆಸ್ಪತ್ರೆಗೆ ದಾಖಲು
ಕೂಡಲೇ ಈ ಕೆಲಸ ಆಗಬೇಕು. ಇಷ್ಟು ಬೆಡ್‌ಗಳು ಖಾಲಿಯಾದರೆ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಬೆಡ್‌ಗಳು ಲಭ್ಯವಾಗುತ್ತವೆ. ಇದರಿಂದ ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರಿ ಆಸ್ಪತ್ರೆಗಳು ಮಾತ್ರವಲ್ಲದೆ ಖಾಸಗಿ ಆಸ್ಪತ್ರೆಗಳು ಕೂಡ ಕಡ್ಡಾಯವಾಗಿ ಈ ನಿರ್ಣಯವನ್ನು ಜಾರಿಗೆ ತರಬೇಕು. ನೋಡಲ್ ಅಧಿಕಾರಿಗಳ ಉಸ್ತುವಾರಿಯಲ್ಲಿ ಈ ಪ್ರಕ್ರಿಯೆ ಕಟ್ಟುನಿಟ್ಟಾಗಿ ನಡೆಯಬೇಕು ಎಂದು ಸೂಚಿಸಿದರು.
ಅನೇಕರು ಆಸ್ಪತ್ರೆಗೆ ಸೇರುವ ಅಗತ್ಯ ಇಲ್ಲದಿದ್ದರೂ ಬಂದು ಸೇರುತ್ತಿದ್ದಾರೆ. ಇದನ್ನು ಕೂಡ ತಡೆಯಬೇಕು ಹಾಗೂ ಅವರನ್ನು ಹೋಂ ಐಸೋಲೇಷನ್ ಮಾಡಿ ಚಿಕಿತ್ಸೆ ಕೊಡಬೇಕು. ಸರ್ಕಾರದ ಮಾರ್ಗಸೂಚಿ ಪ್ರಕಾರ 90ಕ್ಕಿಂತ ಕಡಿಮೆ ಸ್ಯಾಚುರೇಷನ್ ಇರುವವರು ಮಾತ್ರ ಆಸ್ಪತ್ರೆಗೆ ದಾಖಲಾಗಬೇಕು. ಹಣ ಕೊಡ್ತಾರೆ ಎಂದು ಆಸ್ಪತ್ರೆಗಳಿಗೆ ದಾಖಲು ಮಾಡಿಕೊಳ್ಳುವಂತಿಲ್ಲ. ಇದು ಖಾಸಗಿ ಆಸ್ಪತ್ರೆಗಳಿಗೂ ಕಡ್ಡಾಯವಾಗಿ ಅನ್ವಯವಾಗುತ್ತದೆ ಎಂದರು.
ಸಂಬಂಧಿಕರಿಗೆ ಮಾಹಿತಿ ಕಡ್ಡಾಯ
ಸರ್ಕಾರ ರೂಪಿಸಿರುವ ಕೋವಿಡ್ ಚಿಕಿತ್ಸಾ ವಿಧಾನದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಖಾಸಗಿ ಆಸ್ಪತ್ರೆಗಳೂ ಪಾಲಿಸಬೇಕು. ಕೋವಿಡ್ ಶಿಷ್ಟಾಚಾರವನ್ನು ಯಾರೂ ಉಲ್ಲಂಘಿಸುವಂತಿಲ್ಲ. ಆಸ್ಪತ್ರೆಗಳಲ್ಲಿ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ ಎಂದು ದೂರುಗಳು ಬಂದಿವೆ.