ಕರ್ನಾಟಕ

karnataka

ETV Bharat / state

ಬಿಡಿಎ ಅಧ್ಯಕ್ಷ ವಿಶ್ವನಾಥ್ ಶಾಸಕ ಸ್ಥಾನ ಅನರ್ಹಗೊಳಿಸಲು ಅರ್ಜಿ: ಹೈಕೋರ್ಟ್ ನೋಟಿಸ್ - BDA Chairman SR Vishwanath Issue

ಹುದ್ದೆಗೆ ನಿಗದಿಪಡಿಸಿರುವ ವೇತನ, ಇತರೆ ಭತ್ಯೆ ಸೇರಿದಂತೆ 1.92 ಲಕ್ಷ ರೂಪಾಯಿ ಪಡೆದುಕೊಳ್ಳುತ್ತಿರುವ ಅವರು, ಲಾಭದಾಯಕ ಹುದ್ದೆಯಲ್ಲಿ ಮುಂದುವರೆದಿದ್ದಾರೆ. ಈ ಹುದ್ದೆಗೆ ಸರ್ಕಾರದಿಂದ ವೇತನ ಪಡೆದುಕೊಳ್ಳುತ್ತಿರುವ ಕಾರಣ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕಾಗುತ್ತದೆ.

Notice from High Court to MLA Vishwanath
Notice from High Court to MLA Vishwanath

By

Published : May 27, 2022, 9:40 AM IST

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನದಂತಹ ಲಾಭದಾಯಕ ಹುದ್ದೆ ಹೊಂದಿರುವ ಹಿನ್ನೆಲೆಯಲ್ಲಿ ಎಸ್.ಆರ್.ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ವಿಶ್ವನಾಥ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರಿನ ವಕೀಲ ಎ.ಎಸ್.ಹರೀಶ್ ಸಲ್ಲಿಸಿರುವ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಶಾಸಕ ಎಸ್.ಆರ್ ವಿಶ್ವನಾಥ್‌ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಲಹಂಕ ಕ್ಷೇತ್ರದಿಂದ ಎಸ್.ಆರ್.ವಿಶ್ವನಾಥ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸಂವಿಧಾನದ ವಿಧಿ 191(1) (ಎ) ಅನುಸಾರ ಸಂಸದರು ಹಾಗೂ ಶಾಸಕರಾಗಿರುವವರು ಕೇಂದ್ರ ಅಥವಾ ರಾಜ್ಯ ಸರ್ಕಾರದಲ್ಲಿ ಯಾವುದೇ ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಒಂದು ವೇಳೆ ಲಾಭದಾಯಕ ಹುದ್ದೆ ಹೊಂದಿದ್ದರೆ ಶಾಸಕ ಅಥವಾ ಸಂಸದ ಸ್ಥಾನದಿಂದ ಅನರ್ಹರಾಗುತ್ತಾರೆ.

ಆದರೆ, ರಾಜ್ಯ ಸರ್ಕಾರ 2020ರ ನವೆಂಬರ್ 24ರಂದು ವಿಶ್ವನಾಥ್ ಅವರನ್ನು ಬಿಡಿಎ ಅಧ್ಯಕ್ಷ ಹುದ್ದೆಗೆ ನೇಮಕ ಮಾಡಿದೆ. ಹುದ್ದೆಗೆ ನಿಗದಿಪಡಿಸಿರುವ ವೇತನ, ಇತರೆ ಭತ್ಯೆ ಸೇರಿದಂತೆ 1.92 ಲಕ್ಷ ರೂಪಾಯಿ ಪಡೆದುಕೊಳ್ಳುತ್ತಿರುವ ಅವರು, ಲಾಭದಾಯಕ ಹುದ್ದೆಯಲ್ಲಿ ಮುಂದುವರೆದಿದ್ದಾರೆ. ಈ ಹುದ್ದೆಗೆ ಸರ್ಕಾರದಿಂದ ವೇತನ ಪಡೆದುಕೊಳ್ಳುತ್ತಿರುವ ಕಾರಣ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕಾಗುತ್ತದೆ.

ಈ ಕುರಿತಂತೆ 2021ರ ಅಕ್ಟೋಬರ್ 4ರಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರೂ, ಈವರೆಗೆ ಪರಿಗಣಿಸಿಲ್ಲ. ಆದ್ದರಿಂದ, ಅರ್ಜಿದಾರರು ಸಲ್ಲಿಸಿರುವ ಮನವಿ ಪತ್ರವನ್ನು ಪರಿಗಣಿಸಿ ಶಾಸಕ ಸ್ಥಾನದಿಂದ ವಿಶ್ವನಾಥ್ ಅವರನ್ನು ಅನರ್ಹಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ABOUT THE AUTHOR

...view details