ಕರ್ನಾಟಕ

karnataka

ETV Bharat / state

ವಿಧಾನಸಭೆ ಚುನಾವಣೆ ಘೋಷಣೆಗೆ ಕ್ಷಣಗಣನೆ: ನೀತಿ ಸಂಹಿತೆ ಜಾರಿಗೆ ಸಿದ್ಧರಾಗಲು ಡಿಸಿಗಳಿಗೆ ಸೂಚನೆ - Chief Electoral Officer Manoj Kumar Meena

ಯಾವುದೇ ಕ್ಷಣದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದರೂ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಿದ್ಧವಾಗಿರುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Chief Electoral Officer Manoj Kumar Meena
ಮುಖ್ಯ ಚುನಾವಣಾ ಅಧಿಕಾರಿ ಮನೋಜ್​ ಕುಮಾರ್​ ಮೀನಾ

By

Published : Mar 24, 2023, 1:01 PM IST

ಬೆಂಗಳೂರು: ಕೇಂದ್ರ ಚುನಾವಣೆ ಆಯೋಗವು ಯಾವುದೇ ಕ್ಷಣದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಿದ್ಧವಾಗಿರುವಂತೆ ಮುಖ್ಯ ಚುನಾವಣಾ ಅಧಿಕಾರಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ರಾಜ್ಯ ವಿಧಾನಸಭೆಗೆ ಮುಂಬರಲಿರುವ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ವಿಧಾನಸಭಾ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಮಾದರಿ ಚುನಾವಣಾ ನೀತಿ ಸಂಹಿತೆಯನ್ನು ಸಮರ್ಪಕವಾಗಿ ಜಾರಿಗೆ ತರುವ ಅವಶ್ಯಕತೆ ಇದೆ. ಚುನಾವಣೆ ವೇಳಾಪಟ್ಟಿಯನ್ನು ಕೇಂದ್ರ ಚುನಾವಣೆ ಆಯೋಗವು ಯಾವುದೇ ಸಮಯದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಸಿದ್ಧತೆಗಳನ್ನು ಪೂರೈಸಿಕೊಂಡು ಮಾದರಿ ಚುನಾವಣೆ ನೀತಿ ಸಂಹಿತೆ ಅನುಷ್ಠಾನಕ್ಕೆ ಅಗತ್ಯ ಇರುವ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

ಚುನಾವಣೆ ವೇಳಾಪಟ್ಟಿ ಘೋಷಣೆಗೂ ಮುನ್ನ ಕೆಲವು ಮಹತ್ವದ ಚಟುವಟಿಕೆಗಳು ಬಾಕಿ ಉಳಿದಿದ್ದು, ಅವುಗಳನ್ನು ಈ ತಕ್ಷಣವೇ ಪೂರ್ಣಗೊಳಿಸಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರಿಗೆ ಮುಖ್ಯ ಚುನಾವಣಾ ಅಧಿಕಾರಿ ಗುರುವಾರದಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಚುನಾವಣಾ ಅಧಿಕಾರಿಗಳಾಗಿರುವ ಜಿಲ್ಲಾಧಿಕಾರಿಗಳು ಮಾದರಿ ಚುನಾವಣೆ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ತಮ್ಮ ತಮ್ಮ ಜಿಲ್ಲೆಗಳ ವ್ಯಾಪ್ತಿಯಲ್ಲಿ ಈಗಾಗಲೇ ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳು ತಮ್ಮ ಪ್ರಚಾರಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಫ್ಲೆಕ್ಸ್​ಗಳು ಮತ್ತು ಮತ್ತು ಪೋಸ್ಟರ್​ಗಳನ್ನು ತೆಗೆದು ಹಾಕಬೇಕು ಎಂದು ಮುಖ್ಯ ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.

ಮಾದರಿ ಚುನಾವಣಾ ನೀತಿ ಸಂಹಿತೆ ಅನ್ವಯಗೊಳಿಸಲು ಅಗತ್ಯ ಇರುವ ಎಲ್ಲಾ ಮಾಹಿತಿಗಳ ಕೈಪಿಡಿಗಳನ್ನು ಮುಖ್ಯ ಚುನಾವಣಾ ಅಧಿಕಾರಿ ಜಿಲ್ಲಾ ಧಿಕಾರಿಗಳಿಗೆ ಕಳುಹಿಸಿಕೊಟ್ಟಿದ್ದಾರೆ. ಚುನಾವಣೆ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಪೊಲೀಸ್ ಭದ್ರತೆ ಹೆಚ್ಚಳ, ಮತದಾರರಿಗೆ ಆಮಿಷ ನೀಡದಂತೆ ಎಚ್ಚರಿಕೆ ವಹಿಸುವುದು. ಅಕ್ರಮವಾಗಿ ಹಣ, ಮದ್ಯ, ಗಿಫ್ಟ್​ಗಳನ್ನು ಸಾಗಿಸುವುದಕ್ಕೆ ಕಡಿವಾಣ ಹಾಕುವುದು. ಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ಪಕ್ಷಗಳ ಸಭೆ ಸಮಾರಂಭ ನಡೆಸದಂತೆ ನೋಡಿಕೊಳ್ಳಬೇಕು. ಹಾಗೂ ಅವುಗಳಿಗೆ ಅವಕಾಶವನ್ನೂ ನೀಡಬಾರದು.

ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಖರ್ಚು ಮತ್ತು ವೆಚ್ಚಗಳ ಕುರಿತು ನಿಗಾ ಇಡುವುದು. ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ವಹಿಸುವುದು ಸೇರಿದಂತೆ ನೀತಿ ಸಮಿತಿಯ ಅಂಶಗಳನ್ನು ಅನುಷ್ಠಾನಕ್ಕೆ ತರಲು ಈಗಿನಿಂದಲೇ ಜಿಲ್ಲಾ ಚುನಾವಣಾಧಿಕಾರಿಗಳು ಸನ್ನದ್ಧರಾಗಿರಬೇಕು ಎಂದು ಮುಖ್ಯ ಚುನಾವಣಾ ಅಧಿಕಾರಿ ಸೂಚಿಸಿದ್ದಾರೆ.

ಇದನ್ನೂ ಓದಿ:ಚುನಾವಣಾ ಪ್ರಚಾರಕ್ಕೆ 18ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ: ಡಿ ಸಿ ರಾಜೇಂದ್ರ ಪ್ರಸಾದ್​

ABOUT THE AUTHOR

...view details