ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಕೆಲವು ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ನೋಟಿಸ್ ನೀಡಲಾಗಿದೆ. ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ಅವರು ಈ ನೋಟಿಸ್ ನೀಡಿದ್ದು, ಇಂದು(ಶನಿವಾರ) ಬೆಳಗ್ಗೆ 11 ಗಂಟೆಗೆ ಖುದ್ದು ಕಚೇರಿಗೆ ಹಾಜರಾಗಿ ಆರೋಪಗಳಿಗೆ ಉತ್ತರಿಸಲು ನೋಟಿಸ್ನಲ್ಲಿ ಸೂಚಿಸಲಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ತನಿಖೆ ನಡೆಸುವಂತೆ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ದೂರು ನೀಡಿದ್ದರು. ಈ ಹಿನ್ನೆಲೆ ಸರ್ಕಾರಕ್ಕೆ ಸಮಗ್ರ ವರದಿ ನೀಡುವ ಸಲುವಾಗಿ ಒಟ್ಟು 5 ಗಂಭೀರ ಆರೋಪಗಳ ಬಗ್ಗೆ ಹೇಳಿಕೆ ನೀಡಲು ಸೂಚಿಸಲಾಗಿದೆ.
ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ವಿಚಾರದಲ್ಲಿ ಕೋಟ್ಯಂತರ ಹಣ ಅಕ್ರಮ, ಪಾರಂಪರಿಕ ಕಟ್ಟಡದಲ್ಲಿ ಅಕ್ರಮ ಈಜುಕೊಳ ನಿರ್ಮಾಣ ಆರೋಪ, ಪಾರಂಪರಿಕ ಜಿಲ್ಲಾಧಿಕಾರಿ ನಿವಾಸದಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನೆಲಹಾಸು, ಚಾಮರಾಜನಗರ ಜಿಲ್ಲಾಸ್ಪತ್ರೆ ಆಕ್ಸಿಜನ್ ದುರಂತ ವಿಚಾರ ಸೇರಿದಂತೆ ಒಟ್ಟು 5 ಗಂಭೀರ ಆರೋಪಗಳ ಬಗ್ಗೆ ಹೇಳಿಕೆ ನೀಡಲು ಸರ್ಕಾರ ಸೂಚನೆ ನೀಡಿದೆ.