ಬೆಂಗಳೂರು: ರಾಜ್ಯದ 16 ನೇ ವಿಧಾನಸಭೆ ಚುನಾವಣೆಗೆ ಇಂದು (ಏ.13) ಅಧಿಸೂಚನೆ ಹೊರಬಿದ್ದಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. 30 ದಿನಗಳ ಕಾಲ ಚುನಾವಣಾ ಪ್ರಕ್ರಿಯೆಗಳು ನಡೆಯಲಿವೆ. ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.
ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಮತ್ತು 16 ರಂದು ಭಾನುವಾರ ರಜಾ ದಿನವಾಗಿರುವುದರಿಂದ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಸಲು ಕೇವಲ 6 ದಿನ ಮಾತ್ರ ಸಮಯ ಸಿಗಲಿದೆ. ರಾಜಕೀಯ ಚಟುವಟಿಕೆಗಳು ಹೆಚ್ಚಾಗುವುದರ ಜೊತೆಗೆ ಚುನಾವಣ ಆಯೋಗ ನೀತಿ ಸಂಹಿತೆ ಜಾರಿಯನ್ನು ಇನ್ನಷ್ಟು ಬಿಗಿಗೊಳಿಸಲಿದೆ. ಕೇಂದ್ರ ಚುನಾವಣ ಆಯೋಗ ಮಾರ್ಚ್ 29 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಕ್ಷಣದಿಂದ ನೀತಿ ಸಂಹಿತೆ ಜಾರಿಗೆ ಬಂದಿತ್ತು. ಇದೀಗ ಅಧಿಸೂಚನೆ ಹೊರಬಿದ್ದಿದೆ.