ಬೆಂಗಳೂರು:ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸುವ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಕೈಗಾರಿಕೆಗಳ ಕಾಯ್ದೆ 1984ರ ಕೆಲ ನಿಯಮಗಳಿಂದ ಕಾರ್ಖಾನೆಗಳಿಗೆ ವಿನಾಯಿತಿ ನೀಡುವ ಮೂಲಕ ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸಲು ತೀರ್ಮಾನಿಸಲಾಗಿತ್ತು.
ಅಧಿಸೂಚನೆ ಕುರಿತು ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾಜ್ಯ ಸರ್ಕಾರ ಮೇ 22 ರಂದು ಅಧಿಸೂಚನೆ ಹೊರಡಿಸಿ ಕೊರೊನಾ ಬಿಕ್ಕಟ್ಟನ್ನು ‘ಸಾರ್ವಜನಿಕ ತುರ್ತು ಪರಿಸ್ಥಿತಿ’ಯಾಗಿ ಪರಿಗಣಿಸಿ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಿಸಲು ಅನುಕೂಲವಾಗುವಂತೆ ಕೈಗಾರಿಕೆಗಳ ಕಾಯ್ದೆಯ ಸೆಕ್ಷನ್ 5ರಡಿ ಅಧಿಸೂಚನೆ ಹೊರಡಿಸಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ದೀಪಾಂಜಲಿ ನಗರದ ಹೆಚ್.ಮಾರುತಿ ಎಂಬುವರು ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು.
ಜೂನ್ 11ರಂದು ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು. ಅಲ್ಲದೆ, ಶುಕ್ರವಾರದ ಒಳಗೆ ಸರ್ಕಾರ ತನ್ನ ನಿರ್ಧಾರ ಬದಲಿಸದಿದ್ದರೆ ಅಧಿಸೂಚನೆಗೆ ತಡೆಯಾಜ್ಞೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತ್ತು.
ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಅಧಿಸೂಚನೆ ಹಿಂಪಡೆದಿದ್ದು, ಈ ಕುರಿತ ಮಾಹಿತಿಯನ್ನು ಶುಕ್ರವಾರ ಹೈಕೋರ್ಟ್ಗೆ ನೀಡಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹೆಚ್ಚುವರಿ ಹಾಜರಿದ್ದ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಅಧಿಸೂಚನೆ ಹಿಂಪಡೆಯಲಾಗಿದೆ ಎಂದು ತಿಳಿಸಿದರು. ಜತೆಗೆ, ಮೇ 22ರ ಅಧಿಸೂಚನೆ ಹಿಂಪಡೆದು ಕಾರ್ಮಿಕ ಇಲಾಖೆಯ ಉಪ ಕಾರ್ಯದರ್ಶಿ ಸಂಧ್ಯಾ ಎಲ್.ನಾಯಕ್ ಅವರು ಹೊರಡಿಸಿದ ಆದೇಶದ ಪ್ರತಿಯನ್ನು ಮೆಮೊ ಸಹಿತ ಪೀಠಕ್ಕೆ ಸಲ್ಲಿಸಿದರು. ಸರ್ಕಾರದ ಲಿಖಿತ ಹೇಳಿಕೆ ದಾಖಲಿಸಿಕೊಂಡ ಪೀಠ ಅರ್ಜಿ ಇತ್ಯರ್ಥ ಪಡಿಸಿತು.